ಈಗಿನ ಸುದ್ದಿ

ರಾಜ್ಯದಿಂದ ರಾಜ್ಯಸಭೆಗೆ ಚಿದು ಆಯ್ಕೆ?

ರಾಜ್ಯದಿಂದ ರಾಜ್ಯಸಭೆಗೆ ಚಿದು ಆಯ್ಕೆ?
Published On :

ಬೆಂಗಳೂರು: ಲೋಕಸಭೆ ಚುನಾವಣೆಗೆ ಸ್ಪರ್ಧಿಸದೇ ಚುನಾವಣಾ ಕಣದಿಂದ ಹಿಂದೆ ಸರಿದಿರುವ ಕೇಂದ್ರ ವಿತ್ತ ಸಚಿವ ಪಿ.ಚಿದಂಬರಂ ಅವರು ಈಗ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗುವ ಬಗ್ಗೆ ಒಲವು ತೊರಿದ್ದಾರೆ.

ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯಸಭೆ ಚುನಾವಣೆ ಎದುರಾಗಿದ್ದು, ಚಿದಂಬರಂ ಅವರು ಈ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಸಂಬಂಧ ಅವರು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಶಿವಗಂಗಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಚಿದಂಬರಂ ಅವರು ಈ ಬಾರಿ ತಾವು ಚುನಾವಣೆಗೆ ಸ್ಪರ್ಧಿಸದೆ ತಮ್ಮ ಪುತ್ರ ಕಾರ್ತಿ ಚಿದಂಬರಂ ಅವರನ್ನು ಶಿವಗಂಗಾದಿಂದ ಕಣಕ್ಕಿಳಿಸಿದ್ದಾರೆ. ಹೀಗಾಗಿ ಚಿದಂಬರಂ ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಕಳುಹಿಸಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ.

ಮುಂದಿನ ತಿಂಗಳು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯಸಭಾ ಸದಸ್ಯರಾದ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ, ಬಿ.ಕೆ ಹರಿಪ್ರಸಾದ್ ಹಾಗೂ ಬಿಜೆಪಿ ಮುಖಂಡರಾದ ಪ್ರಭಾಕರ್ ಕೋರೆ ಮತ್ತು ವಿ.ರಮಾಜೋಯಿಸ್ ಸದಸ್ಯತ್ವದ ಅವಧಿ ಜೂನ್ 25ಕ್ಕೆ ಮುಗಿಯಲಿದೆ. ಅದಕ್ಕೂ ಮೊದಲೇ ಈ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ವಿಧಾನಸಭೆಯಲ್ಲಿ 122 ಸ್ಥಾನಗಳನ್ನು ಹೊಂದಿರುವ ಆಡಳಿತರೂಢ ಕಾಂಗ್ರೆಸ್ ಎರಡು ಸ್ಥಾನಗಳಲ್ಲಿ ಹಾಗೂ 46 ಸ್ಥಾನಗಳನ್ನು ಹೊಂದಿರುವ ಪ್ರತಿಪಕ್ಷ ಬಿಜೆಪಿ ಒಂದು ಸ್ಥಾನವನ್ನು ಸುಲಭವಾಗಿ ಪಡೆದುಕೊಳ್ಳಲಿದೆ. ಆದರೆ ನಾಲ್ಕನೆ ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.