ಮೋದಿ ರ್ಯಾಲಿಗೆ ಅನುಮತಿ ನಿರಾಕರಣೆ, ಬೀದಿಗಿಳಿದ ಬಿಜೆಪಿ

ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬಿಜೆಪಿ ಚುನಾವಣಾ ರ್ಯಾಲಿಗೆ ಅನುಮತಿ ನೀಡಲು ನಿರಾಕರಿಸಿದ ಚುನಾವಣಾ ಆಯೋಗದ ವಿರುದ್ಧ ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ರೋಡ್ ಶೋಗಳಿಗೆ ಚುನಾವಣಾ ಆಯೋಗ ಅನುಮತಿ ನಿರಾಕರಿಸಿದೆ. ಇದನ್ನು ತೀವ್ರವಾಗಿ ವಿರೋಧಿಸಿರುವ ಬಿಜೆಪಿ ಮುಖಂಡರಾದ ಅರುಣ್ ಜೇಟ್ಲಿ, ನರೇಂದ್ರ ಮೋದಿ ಆಪ್ತ ಅಮಿಶ್ ಶಾ ಸೇರಿ ಅಪಾರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಕೆಸರಿ ಟೋಪಿಗಳನ್ನು ಧರಿಸಿ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸುತ್ತಿದ್ದಾರೆ.
ವಾರಣಾಸಿಯ ಪ್ರಸಿದ್ದ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯ ಲಂಕ ಚೌಕ್ ಬಳಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದಾರೆ. ಮೋದಿ ರ್ಯಾಲಿಗೆ ಅನುಮತಿ ನಿರಾಕರಿಸಿದ ಅಧಿಕಾರಿ ಪ್ರಾಣಜಲ್ ಯಾವದ್ ಅವರನ್ನು ಅಧಿಕಾರದಿಂದ ವಜಾ ಮಾಡುವಂತೆ ಆಗ್ರಹಿಸುತ್ತಿದ್ದಾರೆ.
ಏತನ್ಮಾಧ್ಯೆ, ನರೇಂದ್ರ ಮೋದಿ ಚುನಾವಣಾ ಆಯೋಗ ತಟಸ್ಥ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಅಲ್ಲದೆ ಪೂರ್ವ ನಿರ್ಧಾರಿವಾಗಿದ್ದ ಪೂಜಾ ಕೈಂಕರ್ಯವನ್ನು ಕೈಗೊಳ್ಳಲಾಗದೇ ಇದ್ದುದ್ದಕ್ಕೆ ಗಂಗಾ ಮಾತೆಯಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಗಂಗಾ ಮಾತೆ ಪೂಜಾ ಕೈಂಕರ್ಯ ವಿಚಾರದಲ್ಲಿ ಮೋದಿ ರಾಜಕೀಯ ಮಾಡುತ್ತಿದ್ದಾರೆ ಎಂದು ಎಎಪಿ ಮುಖ್ಯಸ್ಥ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. ಅಲ್ಲದೆ ಗಂಗಾ ಮಾತೆಯ ಪೂಜಾ ಕೈಂಕರ್ಯ ಮಾಡಬೇಕಿದ್ದರೆ ಅದಕ್ಕೆ ಚುನಾವಣಾ ಆಯೋಗದ ಅನುಮತಿ ಬೇಕಿಲ್ಲ. ರಾಜಕೀಯ ಚಟುವಟಿಕೆಗಳಿಗೆ ಮಾತ್ರ ಅನುಮತಿ ಬೇಕಿದೆ ಎಂದು ಲೇವಡಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


