ವಾರಣಾಸಿ ಬಿಜೆಪಿ ಕಚೇರಿ ಮೇಲೆ ಚು.ಆಯೋಗದ ದಾಳಿ

ವಾರಣಾಸಿ: ವಾರಣಾಸಿ ಬಿಜೆಪಿ ಕಚೇರಿಯ ಮೇಲೆ ಭಾನುವಾರ ಚುನಾವಣಾ ಆಯೋಗದ ಅಧಿಕಾರಿಗಳು ದಾಳಿ ನಡೆಸಿದ್ದು, ಪ್ರಚಾರ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
ವಾರಣಾಸಿಯಲ್ಲಿ ನಾಳೆ ನಡೆಯಲಿರುವ ಮತದಾನದ ವೇಳೆ ಚುನಾವಣಾ ಅಕ್ರಮಗಳು ನಡೆಯುವ ಕುರಿತು ಮಾಹಿತಿ ಪಡೆದ ಉತ್ತರ ಪ್ರದೇಶ ಚುನಾವಣಾ ಆಯೋಗದ ಅಧಿಕಾರಿಗಳು, ವಾರಣಾಸಿ ಬಿಜೆಪಿ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಕಚೇರಿಯಲ್ಲಿ ಸಂಗ್ರಹಿಸಲಾಗಿದ್ದ ಬಂಟಿಂಗ್ಸ್, ಬ್ಯಾನರ್, ಕಟೌಟ್‌ಗಳು ಸೇರಿದಂತೆ ಹಲವು ಪ್ರಚಾರ ಸಮಾಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಅಧಿಕಾರಿಗಳ ಕ್ರಮದ ವಿರುದ್ಧ ಸಿಡಿದೆದ್ದ ಬಿಜೆಪಿ ಕಾರ್ಯಕರ್ತರು, ಪೊಲೀಸರು ಮತ್ತು ಅಧಿಕಾರಿಗಳೊಂದಿಗೆ ವಾಗ್ವಾದಕ್ಕೆ ಇಳಿದಿದ್ದರು. ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಪೊಲೀಸರು ಮಧ್ಯ ಪ್ರವೇಶಿಸಿ ಕಾರ್ಯಕರ್ತರನ್ನು ತಡೆದರು. ಆದರೆ ಅಧಿಕಾರಿಗಳ ಈ ದಿಢೀರ್ ದಾಳಿಯಿಂದಾಗಿ ಆಕ್ರೋಶಗೊಂಡಿರುವ ಬಿಜೆಪಿ ಕಾರ್ಯಕರ್ತರು ತಮ್ಮದೇ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ ಪೊಲೀಸ್ ಮತ್ತು ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಈ ನಡುವೆ ಚುನಾವಣಾ ಅಧಿಕಾರಗಳ ದಾಳಿ ಹಿಂದೆ ಉತ್ತರ ಪ್ರದೇಶ ಸರ್ಕಾರದ ಕೈವಾಡವಿದೆ ಎಂದು ಆರೋಪಿಸಿರುವ ಕಾರ್ಯಕರ್ತರು, ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂಸಿಂಗ್ ಯಾದವ್ ಅವರ ವಿರುದ್ಧ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಿದ್ದಾರೆ.
ದಾಳಿ ಕುರಿತು ಆಯೋಗದ ಸ್ಪಷ್ಟನೆ
ತಮ್ಮ ದಾಳಿ ಕುರಿತು ಸ್ಪಷ್ಟನೆ ನೀಡಿರುವ ಉತ್ತರ ಪ್ರದೇಶ ಚುನಾವಣಾ ಆಯೋಗ, ನಾಳೆ ನಡೆಯಲಿರುವ ಮತದಾನದಲ್ಲಿ ಅಕ್ರಮ ನಡೆಯುವ ಕುರಿತು ನಮಗೆ ಮಾಹಿತಿಗಳು ಲಭ್ಯವಾಗಿವೆ. ಅಲ್ಲದೆ ನಿನ್ನೆಯೇ ಪ್ರಚಾರಕ್ಕೆ ತೆರೆಬಿದ್ದಿದ್ದು, ಇಲ್ಲಿ ಅಕ್ರಮವಾಗಿ ಚುನವಾಣಾ ಪ್ರಚಾರ ಸಾಮಾಗ್ರಿಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದೆ. ಹೀಗಾಗಿ ನಾವು ದಾಳಿ ನಡೆಸಿ ಪ್ರಚಾರ ಸಮಾಗ್ರಿಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


