ಯೂಟರ್ನ್ ಹೊಡೆದ 'ಅಮ್ಮಾ', ಬಿಜೆಪಿಗೆ ಎಐಎಡಿಎಂಕೆ ಬೆಂಬಲ ಸಾಧ್ಯತೆ

ನವದೆಹಲಿ: ತೃತೀಯರಂಗದಲ್ಲಿ ಗುರುತಿಸಿಕೊಂಡಿದ್ದ ಜಯಲಲಿತಾ ಅವರು ಯೂಟರ್ನ್ ಹೊಡೆದಿದ್ದು, ಬಿಜೆಪಿ ಪಕ್ಷಕ್ಕೆ ತಮ್ಮ ಬೆಂಬಲ ನೀಡುವ ಸಾಧ್ಯತೆ ಇದೆ.
ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಪಕ್ಷದ ಪರವಾಗಿ ಬರುತ್ತಿದ್ದಂತೆಯೇ ಕೆಲ ಪ್ರಾದೇಶಿಕ ಪಕ್ಷಗಳು ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಲು ತುದಿಗಾಲಲ್ಲಿ ನಿಂತಿವೆ. ಈ ಪಟ್ಟಿಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಮತ್ತು ಒಡಿಶಾದ ಬಿಜೆಡಿ ಪಕ್ಷಗಳು ಪ್ರಮುಖ ಸಾಲಲ್ಲಿ ನಿಂತಿವೆ. ಈ ಹಿಂದೆ ತೃತೀಯರಂಗಕ್ಕೆ ಬೆಂಬಲ ನೀಡಿ, ಪರೋಕ್ಷವಾಗಿ ತಾವೇ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿಕೊಂಡಿದ್ದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಇದ್ದಕ್ಕಿದ್ದಂತೆ ಯೂಟರ್ನ್ ಹೊಡೆದಿದ್ದು, ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಲು ಮುಂದಾಗಿದ್ದಾರೆ.
ಈ ಬಗ್ಗೆ ಜಯಲಲಿತಾ ಅವರು ಬಹಿರಂಗ ಹೇಳಿಕೆ ನೀಡದೇ ಇದ್ದರೂ ಅವರ ಆಪ್ತ ಮತ್ತು ಪಕ್ಷದ ಕೆಲ ಮುಖಂಡರು ಈ ಬಗ್ಗೆ ಸೂಚನೆಗಳನ್ನು ನೀಡುತ್ತಿದ್ದಾರೆ. ಎಐಎಡಿಎಂಕೆ ಪಕ್ಷದ ಮುಖಂಡರಾದ ಕೆ.ಮಲೈಸ್ವಾಮಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಮತ್ತು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಒಳ್ಳೆಯ ಸ್ನೇಹಿತರಾಗಿದ್ದು, ನರೇಂದ್ರ ಮೋದಿ ಅವರು ಪ್ರಧಾನಿಯಾದರೆ ಅವರ ಸ್ನೇಹ ರಾಜಕೀಯವಾಗಿಯೂ ಮುಂದುವರೆಯುತ್ತದೆ ಎಂದು ಹೇಳಿದ್ದಾರೆ.
ಆ ಮೂಲಕ ತೃತೀಯರಂಗವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವ ಕುರಿತು ಮುನ್ಸೂಚನೆ ನೀಡಿದ್ದಾರೆ. ಕೇವಲ ಜಯಲಲಿತಾ ಅವರಷ್ಟೇ ಅಲ್ಲದೆ ಎನ್‌ಡಿಎ ಮೈತ್ರಿಕೂಟವನ್ನು ತೊರೆದು ತೃತೀಯರಂಗಕ್ಕೆ ಬೆಂಬಲ ನೀಡಿದ್ದ, ಬಿಜು ಜನತಾ ದಳ ಪಕ್ಷ ಕೂಡ ಬಿಜೆಪಿಗೆ ಬೆಂಬಲ ನೀಡಲು ಮುಂದಾಗಿದೆ. ಈ ಬಗ್ಗೆ ಮಾತನಾಡಿರುವ ಬಿಜೆಡಿ ಪಕ್ಷದ ಮುಖಂಡ ಪ್ರವತ್ ತ್ರಿಪಾಠಿ ಅವರು, ದೇಶದ ಜನರ ಜನಾದೇಶ ಮತ್ತು ರಾಜ್ಯದ ಪ್ರಜೆಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ನೀಡಲು ತಮಗೇನೂ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ. ಆ ಮೂಲಕ ಬಹಿರಂಗವಾಗಿ ಬಿಜೆಪಿಗೆ ಬೆಂಬಲ ನೀಡಿದ್ದಾರೆ.
ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಸ್ಪಷ್ಟೀಕರಣ ನೀಡಿದ ಬಿಜೆಡಿ ಪಕ್ಷದ ಮುಖ್ಯಸ್ಥ ಮತ್ತು ಒಡಿಶಾ ರಾಜ್ಯದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು, ಬೆಂಬಲ ನೀಡುವ ಕುರಿತು ನಾವು ಬಿಜೆಪಿ ಪಕ್ಷದೊಂದಿಗೆ ಯಾವುದೇ ರೀತಿಯ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಒಟ್ಟಾರೆ ಈ ಹಿಂದೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ವಿರುದ್ಧ ಚುನಾವಣಾ ಪ್ರಚಾರದಲ್ಲಿ ವಾಗ್ದಾಳಿ ನಡೆಸಿದ್ದ ಪ್ರಾದೇಶಿಕ ಪಕ್ಷಗಳು ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಪರವಾಗುತ್ತಿದ್ದಂತೆಯೇ. ತಮ್ಮ ಗೆದ್ದ ಎತ್ತಿನ ಬಾಲ ಹಿಡಿಯುವ ಚಾಳಿಯನ್ನು ಮುಂದುವರೆಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


