ಈಗಿನ ಸುದ್ದಿ

ಕೆಪಿಎಸ್‌ಸಿ ಅಕ್ರಮ: ಮಂಗಳಾ ಶ್ರೀಧರ್ ಅಮಾನತು

ಕೆಪಿಎಸ್‌ಸಿ ಅಕ್ರಮ: ಮಂಗಳಾ ಶ್ರೀಧರ್ ಅಮಾನತು
Published On :

ಬೆಂಗಳೂರು: 2011ನೇ ಸಾಲಿನ ಕೆಎಎಸ್ ಅಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದ ಸದಸ್ಯೆ ಮಂಗಳಾ ಶ್ರೀಧರ್ ಅವರನ್ನು ಅಮಾನತುಗೊಳಿಸಲಾಗಿದೆ. ಇದು ಕೆಪಿಎಸ್‌ಸಿ ಇತಿಹಾಸದಲ್ಲೇ ಆಯೋಗದ ಸದಸ್ಯರೊಬ್ಬರು ಭ್ರಷ್ಟಾಚಾರ ಆರೋಪದಡಿ ಅಮಾನತುಗೊಂಡ ಮೊದಲ ಪ್ರಕರಣವಾಗಿದೆ.

2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿ ಹಗರಣದಲ್ಲಿ ಮಂಗಳಾ ಶ್ರೀಧರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಮಂಗಳಾ ಅವರ ಕೆಪಿಎಸ್‌ಸಿ ಸದಸ್ಯತ್ವವನ್ನೂ ರದ್ದುಗೊಳಿಸುವಂತೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಶಿಫಾರಸು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳಿಗೆ ಮಂಗಳಾ ಅವರ ವಿರುದ್ಧ ಜಾರ್ಜ್‌ಶೀಟ್ ಸಲ್ಲಿಸಲು ರಾಜ್ಯಪಾಲರು ಅನುಮತಿ ನೀಡಿದ್ದು, ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಈಗಾಗಲೇ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಗೋನಾಲ್ ಭೀಮಪ್ಪ ಸೇರಿದಂತೆ ಆರು ಮಂದಿಯ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಂಗಳಾ ಶ್ರೀಧರ್ ಅವರು ಕೆಪಿಎಸ್‌ಸಿ ಸದಸ್ಯೆಯಾಗುವ ಮುನ್ನ ಬಿಬಿಎಂಪಿ ಚುನಾವಣೆಗೂ ಸ್ಪರ್ಧಿಸಿದ್ದರು. 2012 ಡಿಸೆಂಬರ್ 24ರಂದು ಆಗಿನ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮಂಗಳಾ ಶ್ರೀಧರ್ ಅವರನ್ನು ಕೆಪಿಎಸ್‌ಸಿ ಸದಸ್ಯೆಯಾಗಿ ನೇಮಕ ಮಾಡಿದ್ದರು.

2011ರ ನೇಮಕಾತಿ ಪಟ್ಟಿ ರದ್ದು ಸಾಧ್ಯತೆ
ಸರ್ಕಾರದ ವಿರೋಧದ ನಡುವೆಯೂ ಕೆಪಿಎಸ್‌ಸಿ 2011ನೇ ಸಾಲಿನ ಕೆಎಎಸ್ ಅಧಿಕಾರಿಗಳ ನೇಮಕಾತಿ ಪಟ್ಟಿ ಪ್ರಕಟಿಸಿದೆ. ಆದರೆ ನೇಮಕಾತಿಯಲ್ಲಿನ ಅಕ್ರಮಗಳ ಹಿನ್ನೆಲೆಯಲ್ಲಿ ಈಗ ಕೆಪಿಎಸ್‌ಸಿ ಸದಸ್ಯರೊಬ್ಬರು ಅಮಾನತುಗೊಂಡಿದ್ದರಿಂದ ನೇಮಕಾತಿ ಪಟ್ಟಿ ರದ್ದಾಗುವ ಸಾಧ್ಯತೆ ಇದೆ.

ನೇಮಕಾತಿ ವೇಳೆ ಅಕ್ರಮ ನಡೆದಿರುವುದು ಸಿಐಡಿ ತನಿಖೆಯಿಂದ ಸಾಬೀತಾದ ಕಾರಣ ಸದಸ್ಯರನ್ನು ಅಮಾನತುಗೊಳಿಸಲಾಗಿದೆ. ಹೀಗಾಗಿ ಈಗ ಕೆಪಿಎಸ್‌ಸಿ ಪ್ರಕಟಿಸಿರುವ ನೇಮಕಾತಿಗೆ ಯಾವುದೇ ಮಾನ್ಯತೆ ಇಲ್ಲ ಮತ್ತು ಅಕ್ರಮ ಎಸಗಿರುವ ಸದಸ್ಯೆ ಸಂದರ್ಶನ ನಡೆಸಿ ಸಿದ್ಧಪಡಿಸಿರುವ ಪಟ್ಟಿಯನ್ನು ಸರ್ಕಾರ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎನ್ನಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.