ಗುಜರಾತ್ನ ನೂತನ ಸಿಎಂ ಆನಂದಿಬೆನ್ ಪಟೇಲ್

ಗಾಂಧಿನಗರ: ಗುಜರಾತ್ನ ನೂತನ ಮುಖ್ಯಮಂತ್ರಿಯಾಗಿ ಹಾಲಿ ಕಂದಾಯ ಸಚಿವೆ ಆನಂದಿಬೆನ್ ಪಟೇಲ್ರನ್ನು ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ನಿಯೋಜಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು. ಮೋದಿ ರಾಜಿನಾಮೆಯಿಂದಾಗಿ ತೆರವುಗೊಂಡಿದ್ದ ಸಿಎಂ ಸ್ಥಾನಕ್ಕೆ ಆನಂದಿಬೆನ್ ಪಟೇಲ್ ಹೆಸರನ್ನು ಬಿಜೆಪಿ ಶಾಸಕಾಂಗ ಸಭೆಯಲ್ಲಿ ಅಮಿತ್ ಶಾ ಅವರು ಪ್ರಸ್ತಾಪಿಸಿದರು. ಆನಂತರ ಗುಜರಾತ್ನ ಬಿಜೆಪಿ ಶಾಸಕರು ಸರ್ವಾನುಮತದಿಂದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆನಂದಿಬೆನ್ರನ್ನು ಆಯ್ಕೆ ಮಾಡಿದ್ದಾರೆ. ಹೀಗಾಗಿ ಗುಜರಾತ್ನ ಪ್ರಥಮ ಮಹಿಳಾ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಆನಂದಿಬೆನ್ ಪಾತ್ರರಾಗಿದ್ದಾರೆ.
ಗುಜರಾತ್ ಸಿಎಂ ಹುದ್ದೆಗೆ ಮೋದಿ ರಾಜಿನಾಮೆ
ಭಾರತದ 14ನೇ ಪ್ರಧಾನಮಂತ್ರಿ ಹುದ್ದೆಗೇರುತ್ತಿರುವ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ರಾಜಿನಾಮೆ ನೀಡಿದ್ದಾರೆ.
ಮೇ 26ರಂದು ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರು ಇಂದು ಗಾಂಧಿನಗರದಲ್ಲಿನ ರಾಜಭವನಕ್ಕೆ ತೆರಳಿ ರಾಜ್ಯಪಾಲ ಕಮಲಾ ಬೇನಿವಾಲ್ ಅವರನ್ನು ಭೇಟಿ ಮಾಡಿ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದರು. ನರೇಂದ್ರ ಮೋದಿ ಅವರ ರಾಜಿನಾಮೆ ಸ್ವೀಕರಿಸಿದ ಕಮಲಾ ಬೇನಿವಾಲ್ ಅವರು ಮೋದಿಗೆ ಹೂ ಗುಚ್ಛಾ ನೀಡಿ ಶುಭಾಶಯ ಹೇಳಿದರು.
ಸತತ 12 ವರ್ಷಗಳ ಕಾಲ ಗುಜರಾತ್ನ ಸಿಎಂ ಆಗಿ ಅಧಿಕಾರ ನಡೆಸಿದ್ದ ನರೇಂದ್ರ ಮೋದಿ 2014ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಕಾರಣಕ್ಕೆ ದುಮುಕ್ಕಿದ್ದರು. ಗುಜರಾತ್ನ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಮೋದಿಯನ್ನು ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿತ್ತು. ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಿದ್ದ ಮೋದಿ ನೇತೃತ್ವದ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲವು ಸಾಧಿಸಿತ್ತು.
ನಿನ್ನೆ ಎನ್ಡಿಎ ಸಂಸದೀಯ ಪಕ್ಷದ ನಾಯಕನನ್ನಾಗಿ ನರೇಂದ್ರ ಮೋದಿಯನ್ನು ಆಯ್ಕೆ ಮಾಡಲಾಗಿತ್ತು. ನಂತರ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಪ್ರಧಾನಿ ಹುದ್ದೆಗೆ ಮೋದಿ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದರು. ನಿಯೋಜಿತ ಪ್ರಧಾನಿಯಾಗಿರುವ ನರೇಂದ್ರ ಮೋದಿ ಗುಜರಾತ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


