ಮೋದಿ ಪ್ರಮಾಣವಚನ ಸಮಾರಂಭಕ್ಕೆ ಷರೀಫ್ ಆಗಮನ ಖಚಿತ

ನವದೆಹಲಿ: ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ನೀಡಿದ್ದ ಆಹ್ವಾನವನ್ನು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರು ಸ್ವೀಕರಿಸಿದ್ದು, ಮೇ 26ರಂದು ನಡೆಯುವ ಅದ್ಧೂರಿ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಇದರೊಂದಿಗೆ ಷರೀಫ್ ಆಗಮನದ ಬಗ್ಗೆ ಉಂಟಾಗಿದ್ದ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದೆ.
ನವಾಜ್ ಷರೀಫ್ ಅವರು ಸೋಮವಾರ ಬೆಳಗ್ಗೆ ದೆಹಲಿಗೆ ಆಗಮಿಸಲಿದ್ದಾರೆ ಎಂದು ಪಾಕಿಸ್ತಾನ ಪ್ರಧಾನಿ ಕಾರ್ಯಾಲಯ ಇಂದು ಸ್ಪಷ್ಟಪಡಿಸಿದೆ. ಅಲ್ಲದೆ ಷರೀಫ್ ಅವರೊಂದಿಗೆ ಪಾಕ್ ವಿದೇಶಾಂಗ ಸಚಿವ ಸರ್ತಾಜ್ ಅಝಿಝ್ ಅವರು ಸಹ ಆಗಮಿಸಲಿದ್ದಾರೆ ಎಂದು ಹೇಳಿದೆ.
ಈ ಮುಂಚೆ, ಎರಡೂ ದೇಶಗಳ ಹಿತದೃಷ್ಟಿಯಿಂದ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವಂತೆ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಹಾಗೂ ಪಾಕ್ ಪ್ರತಿಪಕ್ಷದ ನಾಯಕ ಖುರ್ಷಿದ್ ಅಹ್ಮದ್ ಶಾಹ್ ಅವರು ಸಲಹೆ ನೀಡಿದ್ದರು. ಆದರೆ ಪಾಕಿಸ್ತಾನ ಸೇನೆ ಮತ್ತು ಐಎಸ್‌ಐ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಹೀಗಾಗಿ ಷರೀಫ್ ಅವರ ಭಾರತ ಭೇಟಿ ಗೊಂದಲದ ಗೂಡಾಗಿತ್ತು. ಏನೇ ಒತ್ತಡಗಳಿದ್ದರೂ ಅಂತಿಮವಾಗಿ ಷರೀಫ್ ಅವರು ಭಾರತಕ್ಕೆ ಆಗಮಿಸುವ ನಿರ್ಧಾರ ಪ್ರಕಟಿಸಿದ್ದಾರೆ.
ನೆರೆಯ ರಾಷ್ಟ್ರಗಳೊಂದಿಗೆ ರಾಜತಾಂತ್ರಿಕ ಸಂಬಂಧ ಸುಧಾರಣೆ ನಿಟ್ಟಿನಲ್ಲಿ ಪಾಕಿಸ್ತಾನ ಸೇರಿದಂತೆ ಸಾರ್ಕ್ ರಾಷ್ಟ್ರಗಳಿಗೆ ಮೋದಿ ತಮ್ಮ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ನೀಡಿದ್ದರು. ಇದಕ್ಕೆ ಸಾರ್ಕ್ ಸದಸ್ಯ ರಾಷ್ಟ್ರಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದವು. ಆದರೆ ಪಾಕಿಸ್ತಾನ ಮಾತ್ರ ಇವರೆಗೂ ಯಾವುದೇ ನಿರ್ಧಾರ ಪ್ರಕಟಿಸಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


