LIVE: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞಾವಿಧಿ ಸ್ವೀಕಾರ 

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಿಗೆ ರಾಜ್ಯಪಾಲ ಥಾವರ್ ಚಂದ್ರ ಗೆಹ್ಲೋಟ್ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.
ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿಕೊಂಡ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿಕೊಂಡ ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಜುಲೈ 28, 2021ರ ಬುಧವಾರ ಪ್ರಮಾಣ ವಚನ ಸ್ವೀಕರಿಸಿಕೊಂಡಿದ್ದಾರೆ.ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

ಹಾವೇರಿ ಜಿಲ್ಲೆಯ ಶಿಗ್ಗಾಂವ್ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ 61 ವರ್ಷದ ಬಸವರಾಜ ಬೊಮ್ಮಾಯಿಯವರು ಬಿ ಎಸ್ ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು. ಶಿಗ್ಗಾಂವ್ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ ಬಂದಿರುವ ಬೊಮ್ಮಾಯಿಯವರು ಎರಡು ಬಾರಿ ವಿಧಾನಪರಿಷತ್ ಸದಸ್ಯರು ಕೂಡ ಆಗಿದ್ದಾರೆ.

ರಾಜಕೀಯ ವಿದ್ಯಾಮಾನದಲ್ಲಿ ಬಿ ಎಸ್ ಯಡಿಯೂರಪ್ಪನವರು 4ನೇ ಅವಧಿಗೆ ಅಧಿಕಾರ ಪೂರ್ಣಗೊಳಿಸದೆ ರಾಜೀನಾಮೆ ಸಲ್ಲಿಸಿದರು. ನಂತರ ನಡೆದ ಬಿಜೆಪಿ ಶಾಸಕಾಂಗ ಪಕ್ಷ ಸಭೆಯಲ್ಲಿ ಬಸವರಾಜ ಬೊಮ್ಮಾಯಿಯವರನ್ನು ಸರ್ವಾನುಮತದಿಂದ ನೂತನ ಸಿಎಂ ಎಂದು ಘೋಷಿಸಲಾಯಿತು.

ಉತ್ತರ ಕರ್ನಾಟಕದ ಲಿಂಗಾಯತ ನಾಯಕ ಬೊಮ್ಮಾಯಿಯವರು ಯಡಿಯೂರಪ್ಪನವರಿಗೆ ನಿಷ್ಠಾವಂತ. ಬೊಮ್ಮಾಯಿಯವರ ಆಯ್ಕೆಯಲ್ಲಿ ಯಡಿಯೂರಪ್ಪನವರ ಪಾತ್ರ ಮತ್ತು ಪ್ರಭಾವ ನಿಚ್ಚಳವಾಗಿದೆ ಎಂದು ಪಕ್ಷದ ಮೂಲಗಳು ಹೇಳುತ್ತವೆ.

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಆರ್ ಬೊಮ್ಮಾಯಿಯವರ ಮಗ ಇಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಈ ಹಿಂದೆ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಗೃಹ, ಕಾನೂನು, ಸಂಸದೀಯ ವ್ಯವಹಾರಗಳ ಸಚಿವರಾಗಿ ಅಧಿಕಾರ ನಡೆಸಿದ ಅನುಭವವಿದೆ.

ಕರ್ನಾಟಕದಲ್ಲಿ ಹೆಚ್ ಡಿ ದೇವೇಗೌಡ ಮತ್ತು ಹೆಚ್ ಡಿ ಕುಮಾರಸ್ವಾಮಿ ನಂತರ ಮುಖ್ಯಮಂತ್ರಿಯಾದ ಎರಡನೇ ತಂದೆ-ಮಗ ಕಾಂಬಿನೇಷನ್ ಎಸ್ ಆರ್ ಬೊಮ್ಮಾಯಿ ಮತ್ತು ಬಸವರಾಜ ಬೊಮ್ಮಾಯಿಯವರದ್ದು. 

ನಿನ್ನೆಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಕೇಂದ್ರದಿಂದ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಜಿ ಕಿಶನ್ ರೆಡ್ಡಿ, ಕರ್ನಾಟಕದ ಉಸ್ತುವಾರಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯದ ನಾಯಕರು ಇಂದಿನ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮುನ್ನ ಬೊಮ್ಮಾಯಿಯವರು ಬಿ ಎಸ್ ಯಡಿಯೂರಪ್ಪ, ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ್ದರು.

ತಿಂಗಳುಗಳಿಂದ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತಾರೆ ಎಂಬ ಊಹಾಪೋಹಗಳಿಗೆ ಕೊನೆಗೂ ಪೂರ್ಣ ವಿರಾಮ ಹಾಕಿದ್ದು ಮೊನ್ನೆ ಸೋಮವಾರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದರು. ಬಿಜೆಪಿ ಸರ್ಕಾರದಲ್ಲಿ 2 ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರು.

ನಾಮ ಫಲಕ: ಸಿಎಂ ಆಗಿ ಬಸವರಾಜ ಬೊಮ್ಮಾಯಿಯವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ ಸಿಎಂ ಕೊಠಡಿಯ ನಾಮಫಲಕ ಬದಲಾಗಿದೆ. ನಿನ್ನೆಯವರೆಗೆ ಬಿ ಎಸ್ ಯಡಿಯೂರಪ್ಪನವರ ಹೆಸರು ಇದ್ದರೆ ಇಂದು ಬಸವರಾಜ ಬೊಮ್ಮಾಯಿ ಸಿಎಂ ಎಂದು ನಾಮಫಲಕ ಅಲಂಕೃತಗೊಂಡಿದೆ. 

ಬಸವರಾಜ ಬೊಮ್ಮಾಯಿಯವರು ನೂತನ ಸಿಎಂ ಆಗುತ್ತಿದ್ದಂತೆ ಅವರ ಅಭಿಮಾನಿಗಳು ಕೇಂದ್ರ ನಾಯಕರಿಗೆ, ಬೊಮ್ಮಾಯಿಯವರಿಗೆ, ಬಿ ಎಸ್ ಯಡಿಯೂರಪ್ಪನವರಿಗೆ ಜಯವಾಗಲಿ ಎಂದು ಘೋಷಣೆಗಳನ್ನು ಕೂಗಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com