ಹಿನ್ನೋಟ 2021: ಮೂರು ಕೃಷಿ ಕಾನೂನುಗಳು ರದ್ದು; ಮೋದಿ ಐತಿಹಾಸಿಕ ಘೋಷಣೆಗೆ ಕಾರಣವಾದ ರೈತ ಹೋರಾಟದ ಹಾದಿ...

ಕಳೆದ ವರ್ಷ ಸೆಪ್ಟೆಂಬರ್ 27 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ಕೃಷಿ ಕಾಯ್ದೆ ತಿದ್ದುಪಡಿ ಮಸೂದೆಗೆ ಅಂಕಿತ ಹಾಕಿದ ನಂತರ ರಾಷ್ಟ್ರ ರಾಜಧಾನಿ ದೆಹಲಿಯ ಗಡಿಗಳಲ್ಲಿ ಆರಂಭವಾದ ರೈತರ...
ರೈತರ ಪ್ರತಿಭಟನೆ
ರೈತರ ಪ್ರತಿಭಟನೆ

ನವದೆಹಲಿ: ಕಳೆದ ವರ್ಷ ಸೆಪ್ಟೆಂಬರ್ 27 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ಕೃಷಿ ಕಾಯ್ದೆ ತಿದ್ದುಪಡಿ ಮಸೂದೆಗೆ ಅಂಕಿತ ಹಾಕಿದ ನಂತರ ರಾಷ್ಟ್ರ ರಾಜಧಾನಿ ದೆಹಲಿಯ ಗಡಿಗಳಲ್ಲಿ ಆರಂಭವಾದ ರೈತರ ಉಗ್ರ ಹೋರಾಟ ಈ ವರ್ಷದ ನವೆಂಬರ್ 29 ರಂದು ಸಂಸತ್ತಿನಲ್ಲಿ ಅಧಿಕೃತವಾಗಿ ಕೃಷಿ ಕಾನೂನುಗಳನ್ನು ಹಿಂಪಡೆದ ನಂತರವೇ ಅಂತ್ಯಗೊಂಡಿತು.

ಕಳೆದ ನವೆಂಬರ್ 29ರಂದು ಸಂಸತ್ ನ ಚಳಿಗಾಲದ ಅಧಿವೇಶನದಲ್ಲಿ ಕೆಲವೇ ನಿಮಿಷಗಳಲ್ಲಿ ಕೃಷಿ ಕಾನೂನುಗಳ ರದ್ದತಿ ಮಸೂದೆ 2021 ಅನ್ನು ಅಂಗೀಕರಿಸುವ ಮೂಲಕ ಕೇಂದ್ರ ಸರ್ಕಾರ ರೈತರ ಬೇಡಿಕೆ ಈಡೇರಿಸಿದೆ.

ರೈತ ಸಂಘಟನೆಗಳು ಜನವರಿ 26, ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರಾಕ್ಟರ್ ಪರೇಡ್‌ ನಡೆಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿದವು, ಈ ವೇಳೆ ಸಾವಿರಾರು ರೈತ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆಯಿತು. ಕೆಲವರು ಕೆಂಪು ಕೋಟೆಗೆ ನುಗ್ಗಿ ನಿಶಾನ್ ಸಾಹಿಬ್ ಧ್ವಜ ಹಾರಿಸಿದರು.

ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಸೇರಿದ ಎಸ್‌ಯುವಿಯು ಪ್ರತಿಭಟನಾ ನಿರತ ರೈತರ ಮೇಲೆ ಹರಿದು ಐವರನ್ನು ಬಲಿ ಪಡೆದಿತ್ತು.

ಕೊರೆಯುವ ಚಳಿಯನ್ನೂ ಲೆಕ್ಕಿಸದೇ ಕಳೆದ ವರ್ಷ ನವೆಂಬರ್ ನಿಂದ ನಡೆಸಿದ ರೈತರ ಪ್ರತಿಭಟನೆಗೆ ಕೊನೆಗೂ ಮಣಿದ ಕೇಂದ್ರ ಸರ್ಕಾರ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಿದೆ. ಆದರೆ ಮೋದಿ ಸರ್ಕಾರದ ಈ ಮಹತ್ವದ ನಿರ್ಧಾರಕ್ಕೆ ರೈತರ ಸುದಿರ್ಘ ಪ್ರತಿಭಟನೆ ಕಾರಣವಲ್ಲ. ಪಂಜಾಬ್ ಮತ್ತು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಕಾರಣ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಇತ್ತೀಚಿನ ಉಪಚುನಾವಣೆಗಳ ಫಲಿತಾಂಶಗಳನ್ನು ಪರಿಶೀಲಿಸಿದ ನಂತರ ಮುಂಬರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದಿದೆ ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ವಿವಾದಾತ್ಮಕ ಮೂರು ಕೃಷಿ ಕಾನೂನುಗಳ ವಿರುದ್ಧ ಕಳೆದ ಒಂದು ವರ್ಷದಿಂದ ರಾಷ್ಟ್ರ ರಾಜಧಾನಿ ದೆಹಲಿಯ ಗಡಿಗಳಾದ ಸಿಂಘು, ಟಿಕ್ರಿ ಮತ್ತು ಘಾಜಿಪುರ ಗಡಿಗಳಲ್ಲಿ ರೈತರು ನಡೆಸಿದ ಪ್ರತಿಭಟನೆ ವೇಳೆ 700ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ನೂತನ ಕೃಷಿ ಕಾನೂನುಗಳ ರದ್ದತಿಗಾಗಿ ದೆಹಲಿಯ ಅನೇಕ ಗಡಿ ಪ್ರದೇಶಗಳಲ್ಲಿ ಪಂಜಾಬ್, ಹರಿಯಾಣ ಸೇರಿದಂತೆ ದೇಶದ ವಿವಿಧೆಡೆಗಳಿಂದ ಬಂದಿದ್ದ ಸಹಸ್ರಾರು ರೈತರು ಚಳಿ, ಮಳೆ ಎನ್ನದೇ ಟೆಂಟ್ ಗಳಲ್ಲಿ ವಾಸಿಸುತ್ತಾ ಸುದೀರ್ಘ ಒಂದು ವರ್ಷದವರೆಗೆ ಪ್ರತಿಭಟನೆ ನಡೆಸಿದ್ದರು. ಇದು ಭಾರತ ಇತ್ತೀಚಿನ ವರ್ಷಗಳಲ್ಲಿ ಕಂಡ ಸುದೀರ್ಘ ಹೋರಾಟ ಎಂದು ವ್ಯಾಖ್ಯಾನಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com