ಮತ್ತೊಮ್ಮೆ ಮೋದಿ ಜಪ
ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯ 2ನೇ ದಿನವಾದ ಶನಿವಾರವೂ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಗುಣಗಾನ ಮುಂದುವರಿದಿದೆ.
3 ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಮೋದಿ ಅವರಿಗೆ ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಹೊಗಳಿಕೆಯ ಮಹಾಪೂರ ಹರಿಸಿದ್ದಾರೆ. ಮೋದಿ ಅವರ ಗುಜರಾತ್ ಮಾದರಿ ಅಭಿವೃದ್ಧಿಗೆ ಇಡೀ ವಿಶ್ವವೇ ತಲೆಬಾಗಿದೆ. ಮೋದಿ ಅಭಿವೃದ್ಧಿ ಮಾದರಿಯನ್ನು ಅಮೆರಿಕ, ಐರೋಪ್ಯ ಒಕ್ಕೂಟ ಸೇರಿ ಅನೇಕ ದೇಶಗಳು ಕೊಂಡಾಡಿವೆ ಎಂದು ಸಿಂಗ್ ಹೇಳಿದ್ದಾರೆ. ಸತತ 3 ಬಾರಿ ಆಯ್ಕೆ ಆಗಿರುವ ಈ ಮುಖಂಡನಿಗೆ ಎಲ್ಲರೂ ಎದ್ದುನಿಂತು ಗೌರವ ಸೂಚಿಸುವಂತೆ ರಾಜನಾಥ್ ಅವರೇ ಸೂಚಿಸಿದರು. ಈ ವೇಳೆ, ದೇಶದ ವಿವಿಧೆಡೆಯಿಂದ ಆಗಮಿಸಿದ್ದ 2,200 ಪ್ರತಿನಿಧಿಗಳು ಎದ್ದು ನಿಂತು ಚಪ್ಪಾಳೆ ಮೂಲಕ ಗೌರವ ಸಲ್ಲಿಸಿದರು.
'ಅವಧಿಪೂರ್ವ ಚುನಾವಣೆಗೆ ಸಿದ್ಧರಾಗಿ'
ಅವಧಿಪೂರ್ವ ಚುನಾವಣೆಗೆ ಸಿದ್ಧರಾಗಬೇಕು ಎಂದು ರಾಜನಾಥ್ ಸಿಂಗ್ ಅವರು ಬಿಜೆಪಿ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ. ಯಾವುದೇ ಸಂದರ್ಭದಲ್ಲಾದರೂ ಲೋಕಸಭೆ ಚುನಾವಣೆ ಘೋಷಣೆಯಾಗಬಹುದು. ಹಾಗಾಗಿ ಪಕ್ಷದ ಕಾರ್ಯಕರ್ತರು ಅವಧಿಪೂರ್ವ ಚುನಾವಣೆಗೆ ಈಗಿನಿಂದಲೇ ಸಿದ್ಧರಾಗಬೇಕು. ಜತೆಗೆ, ಈ ವರ್ಷ ಕರ್ನಾಟಕ, ಮಧ್ಯಪ್ರದೇಶ ಸೇರಿ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಇದರ ಸಿದ್ಧತಾ ಕಾರ್ಯವನ್ನೂ ಚುರುಕುಗೊಳಿಸುವಂತೆ ಅವರು ಸೂಚಿಸಿದರು.
ಕಾಶ್ಮೀರ ಪಂಡಿತರನ್ನು ನಾಮ ನಿರ್ದೇಶನ ಮಾಡಿ
ಉಗ್ರರ ಭೀತಿಯಿಂದಾಗಿ ರಾಜ್ಯಬಿಟ್ಟು ತೆರಳಿದ್ದ ಕಾಶ್ಮೀರಿ ಪಂಡಿತರನ್ನು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ನಾಮನಿರ್ದೇಶನ ಮಾಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ 111 ಸ್ಥಾನಗಳಿವೆ. ಇದರಲ್ಲಿ 87 ಸೀಟುಗಳಿಗೆ ಮಾತ್ರ ಚುನಾವಣೆ ನಡೆಯುತ್ತದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಳಿದ 24 ಸ್ಥಾನಗಳನ್ನು ಖಾಲಿ ಬಿಡಲಾಗಿದೆ. ಹಾಗಾಗಿ ಪಾಕ್ ಆಕ್ರಮಿತ ಕಾಶ್ಮೀರದಿಂದ ಕಾಶ್ಮೀರಿ ಪಂಡಿತರನ್ನು ಈ 24 ಸ್ಥಾನಗಳಿಗೆ ನಾಮನಿರ್ದೇಶನ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರಾಜನಾಥ್ ಸಿಂಗ್ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

