

ಚೆನ್ನೈ: ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ 10 ವರ್ಷ ಕಾಲ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧ ಹೇರಲಾಗಿದೆ. ಈ ಸಂಬಂಧ ತಮಿಳುನಾಡು ಸರ್ಕಾರ ಬುಧವಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಶಿಕ್ಷೆಗೆ ಗುರಿಯಾದ ದಿನದಿಂದಲೇ ಅಂದರೆ ಸೆ.27, 2014ರಿಂದಲೇ ಜಯಲಲಿತಾ ನಾಲ್ಕು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಕಳೆದುಕೊಳ್ಳಲಿದ್ದಾರೆ. ಇದರ ಜತೆಗೆ, ನಾಲ್ಕು ವರ್ಷ ಜೈಲು ಶಿಕ್ಷೆ ಪೂರ್ತಿಗೊಳಿಸಿ ಬಿಡುಗಡೆಯಾದರೂ ಸುಪ್ರೀಂ ಕೋರ್ಟ್ನ ತೀರ್ಪಿನಂತೆ 1951ರ ಪ್ರಜಾಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 8 ರಡಿ ಮತ್ತೆ ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವ ಅವಕಾಶದಿಂದ ವಂಚಿತರಾಗಲಿದ್ದಾರೆ ಎಂದು ಅಧಿಸೂಚನೆ ಹೇಳಿದೆ.