ಟಿಎಂಸಿ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಿ: ಬಿಜೆಪಿ

ತೃಣಮೂಲ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಭಾನುವಾರ ಬಿಜೆಪಿ ಆಗ್ರಹಿಸಿದೆ.
ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ರಾಹುಲ್ ಸಿನ್ಹಾ (ಸಂಗ್ರಹ ಚಿತ್ರ)
ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ರಾಹುಲ್ ಸಿನ್ಹಾ (ಸಂಗ್ರಹ ಚಿತ್ರ)

ಕೊಲ್ಕತಾ: ತೃಣಮೂಲ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಭಾನುವಾರ ಬಿಜೆಪಿ ಆಗ್ರಹಿಸಿದೆ.

ಬಹುಕೋಟಿ ಶರದಾ ಚಿಟ್‌ಫಂಡ್ ಹಗರಣದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ಭಾಗಿಯಾಗಿದ್ದು, ಪಕ್ಷದ ಎಲ್ಲ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ತನಿಖಾಧಿಕಾರಿಗಳನ್ನು ಬಿಜೆಪಿ ಒತ್ತಾಯಿಸಿದೆ. 'ಶರದಾ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಟಿಎಂಸಿಯ ಇಬ್ಬರು ರಾಜ್ಯಸಭಾ ಸದಸ್ಯರನ್ನು ತನಿಖಾಧಿಕಾರಿಗಳು ಬಂಧಿಸಿದ್ದು, ಈಸ್ಟ್ ಬೆಂಗಾಲ್ ಮತ್ತು ಮೋಹನ್ ಬಗಾನ್ ತಂಡದ ಬ್ಯಾಂಕ್‌ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಆದರೆ ತೃಣಮೂಲ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನೇಕೆ ಮುಟ್ಟುಗೋಲು ಹಾಕಿಕೊಂಡಿಲ್ಲ' ಎಂದು ಪಶ್ಚಿಮ ಬಂಗಾಳ ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ.

'ತೃಣಮೂಲ ಕಾಂಗ್ರೆಸ್ ಪಕ್ಷದ ಇಬ್ಬರು ರಾಜ್ಯಸಭಾ ಸದಸ್ಯರನ್ನು ತನಿಖಾಧಿಕಾರಿಗಳು ಬಂಧಿಸಿದ್ದು, ಹಗರಣದಲ್ಲಿ ಟಿಎಂಸಿ ಪಾತ್ರವಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಹೀಗಾಗಿ ತೃಣಮೂಲ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು' ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ರಾಹುಲ್ ಸಿನ್ಹಾ ಅವರು ಹೇಳಿದ್ದಾರೆ.

ಅಂತೆಯೇ ಟಿಎಂಸಿ ಪಕ್ಷದ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಸಿನ್ಹಾ ಅವರು, ಮಮತಾ ಅವರ ಅಹಂಕಾರ ಮತ್ತು ಅಸಹಿಷ್ಣುತಾ ಮನೋಭಾವದಿಂದಾಗಿ ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ ಅಧೋಗತಿಯತ್ತ ಸಾಗುತ್ತಿದೆ. ರಾಜ್ಯದ ಜನತೆ ಟಿಎಂಸಿ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಸಿನ್ಹಾ ಹೇಳಿದರು. ಅಲ್ಲದೆ ಟಿಎಂಸಿ ಸಂಸದರ ಬಂಧನದ ಹಿಂದೆ ಬಿಜೆಪಿ ಕೈವಾಡವಿಲ್ಲ. ಪ್ರಕರಣವನ್ನು ಸುಪ್ರೀಂಕೋರ್ಟ್ ಆದೇಶದ ಹಿನ್ನಲೆಯಲ್ಲಿ ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಬಿಜೆಪಿಗೂ ಹಗರಣದ ತನಿಖೆಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com