
ರಾಯ್ಪುರ: ಛತ್ತೀಸ್‌ಗಢದ ಬಲೋಡ ಬಜಾರ್ ಜಿಲ್ಲೆಯಲ್ಲಿ ಖಾಸಗಿ ಬಸ್ ವೊಂದು ನದಿಗೆ ಉರುಳಿ ಬಿದ್ದ ಪರಿಣಾಮ 19 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, 5 ಮಂದಿ ನಾಪತ್ತೆಯಾಗಿರುವ ಘಟನೆ ಗುರುವಾರ ನಡೆದಿದೆ.
ಬಿಲಾಸ್ಪುರ ದಿಂದ ಭಟಪರ ಪ್ರದೇಶಕ್ಕೆ ಬರುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಶಿವನಾಥ್ ನದಿಗೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿ ಸುಮಾರು 25-30 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಬಸ್ ನದಿಗೆ ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ ಸುಮಾರು 19 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ನದಿಗೆ ಬಿದ್ದಿರುವ ಪ್ರಯಾಣಿಕರನ್ನು ರಕ್ಷಣೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಬಸ್ ನಲ್ಲಿದ್ದ ಸುಮಾರು 20 ಮಂದಿಯನ್ನು ಈಗಾಗಲೇ ರಕ್ಷಿಸಲಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ನಲ್ಲಿ 6 ಮಂದಿ ನಾಪತ್ತೆಯಾಗಿರುವುದಾಗಿ ಹೇಳಲಾಗುತ್ತಿದ್ದು, ನಾಪತ್ತೆಯಾಗಿರುವವರ ಹುಡುಕಾಟ ಕಾರ್ಯ ಆರಂಭಿಸಲಾಗಿದೆ ಎಂದು ತಿಳಿದುಬಂದಿದೆ.
ಬಸ್ ನಲ್ಲಿ ಕೆಲವು ಯಾಂತ್ರಿಕ ಭಾಗಗಳು ಕೆಲಸ ಮಾಡುವುದನ್ನು ನಿಲ್ಲಿಸಿರುವುದು ಘಟನೆಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಬ್ರಿಡ್ಜ್ ಮೂಲಕ ಈಗಾಗಲೇ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
Advertisement