

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅವ್ಯವಹಾರ ಪ್ರಕರಣದ ವಿಚಾರಣೆ ಡಿಸೆಂಬರ್ 19ಕ್ಕೆ ಮುಂದೂಡಿಕೆಯಾಗಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಸೋನಿಯಾ ಹಾಗೂ ರಾಹುಲ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ, ನನ್ನ ಕಕ್ಷಿದಾರರು ವಿಚಾರಣೆಗೆ ಹಾಜರಾಗಲು ಸಿದ್ಧರಾಗಿದ್ದಾರೆ. ಆದರೆ ಅವರು ಬಿಡುವಿಲ್ಲದ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ರಾಹುಲ್ ಗಾಂಧಿ ಅವರು ಪ್ರವಾಹ ಪೀಡಿತ ಚೆನ್ನೈಗೆ ತೆರಳಿದ್ದರೆ, ಸೋನಿಯಾ ಗಾಂಧಿ ಅವರು ಕಲಾಪದಲ್ಲಿ ಭಾಗವಹಿಸಿದ್ದಾರೆ. ಹೀಗಾಗಿ ವಿಚಾರಣೆ ಮುಂದೂಡಬೇಕೆಂದು ಮನವಿ ಮಾಡಿಕೊಂಡರು.
ಸಿಂಘ್ವಿ ಮನವಿಯನ್ನು ಪರಿಗಣಿಸಿದ ಕೋರ್ಟ್, ಡಿ.19ರಂದು ಖುದ್ದು ಹಾಜರಾಗುವಂತೆ ಸೋನಿಯಾ ಹಾಗೂ ರಾಹುಲ್ ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿದೆ.
ಇನ್ನು ಪ್ರಕರಣದ ಬಗ್ಗೆ ಇದೇ ಮೊದಲ ಬಾರಿಗೆ ವರದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಸೋನಿಯಾ ಗಾಂಧಿ, ಇದೊಂದು ರಾಜಕೀಯ ಒಳಸಂಚು, ನೀವೇ ನಿರ್ಧರಿಸಿ ಎಂದು ಹೇಳಿದ್ದಾರೆ.