

ಶಿಮ್ಲಾ: ನ್ಯಾಷನಲ್ ಹೆರಾಲ್ಡ್ ಕೇಸಿಗೆ ಸಂಬಂಧಪಟ್ಟಂತೆ ಪ್ರಧಾನ ಮಂತ್ರಿಗಳ ಪ್ರತಿಕೃತಿ ದಹಿಸುವಾಗ ಉಂಟಾದ ಬೆಂಕಿ ಅವಘಡದಲ್ಲಿ ಐದು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿರುವ ಘಟನೆ ಶಿಮ್ಲಾದ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದಿದೆ.
ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸುಖ್ ವಿಂದರ್ ಸಿಂಗ್ ಸುಕ್ಕು ಮತ್ತು ಸಚಿವರುಗಳು ಹಾಗೂ ಪಕ್ಷದ ಹಿರಿಯ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸುಖ್ ವಿಂದರ್ ಸಿಂಗ್, ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಕಾಂಗ್ರೆಸ್ ಪಕ್ಷದ ವಿರುದ್ಧ ನಿಗೂಢ, ದುರುದ್ದೇಶಪೂರಿತ ಪ್ರಚಾರ ನಡೆಸುತ್ತಿದ್ದು, ಪ್ರಧಾನ ಮಂತ್ರಿಗಳು 2014ರ ಲೋಕಸಭಾ ಚುನಾವಣೆಗೆ ಮುನ್ನ ಘೋಷಿಸಿದಂತೆ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮಾಡಬೇಕೆಂಬುದು ಅದರ ಏಕಮೇವ ಉದ್ದೇಶವಾಗಿದೆ ಎಂದು ಆರೋಪಿಸಿದರು.
ನ್ಯಾಷನನ್ ಹೆರಾಲ್ಡ್ ಕೇಸು ಸಂಪೂರ್ಣವಾಗಿ ಸಂಪೂರ್ಣವಾಗಿ ರಾಜಕೀಯ ಪ್ರೇರಿತವಾಗಿದ್ದು, ಎನ್ ಡಿಎ ಸರ್ಕಾರದ ಹಗೆತನದ ರಾಜಕೀಯವಾಗಿದೆ ಎಂದು ಹೇಳಿದರು.
ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಕಾಂಗ್ರೆಸ್ ನಾಯಕತ್ವದ ವಿರುದ್ಧ ಅಪಪ್ರಚಾರ ಮಾಡಲು, ಮಾನಹಾನಿ ಮಾಡಲು ಯತ್ನಿಸುತ್ತಿದ್ದಾರೆ ಎಂದರು.
ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಜನತೆಗೆ ನೀಡಿದ್ದ ಆಶ್ವಾಸನೆಗಳಾದ ಕಪ್ಪು ಹಣ ವಾಪಸ್ಸು ತರಿಸುವುದು, ಹಣದುಬ್ಬರ ನಿಯಂತ್ರಣ, ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ವಿಫಲವಾಗಿರುವುದರಿಂದ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ನಾಯಕರನ್ನು ಗುರಿಯಾಗಿರಿಸಿಕೊಳ್ಳಲಾಗಿದೆ ಎಂ ದು ಸುಖ್ವೀರ್ ಆರೋಪಿಸಿದ್ದಾರೆ.
ಆದರೆ ಅಂತಹ ಪಿತೂರಿ ರಾಜಕಾರಣ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಹೇಳಿದರು.ಇದಕ್ಕೆ ಪ್ರತಿಕ್ರಿಯಿಸಿರುವ ಹಿಮಾಚಲ ಪ್ರದೇಶ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜೀವ್ ಬಿಂದಾಲ್ ಮತ್ತು ಮುಖ್ಯ ವಕ್ತಾರ ಗಣೇಶ್ ದತ್, ವಿವಾದಾತ್ಮಕ ವಿಷಯಗಳನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಎರಡು ಗುಣಮಟ್ಟವನ್ನು ಅನುಸರಿಸುತ್ತದೆ. ಐದು ಮಂದಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಕೃತಿ ದಹನ ಪ್ರಕರಣದ ಬಗ್ಗೆ ಅನುಮಾನ ಉಂಟಾಗುತ್ತಿದ್ದು, ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.