

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 19ರಂದು ನ್ಯಾಯಾಲಯಕ್ಕೆ ಹಾಜರಾಗುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸದಿರಲು ನಿರ್ಧರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಪ್ರಕರಣ ಸಂಬಂಧ ಶನಿವಾರ ಕೋರ್ಟ್ಗೆ ಹಾಜರಾಗುತ್ತಿರುವ ಸೋನಿಯಾ ಹಾಗೂ ರಾಹುಲ್ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸುವ ಬದಲು, ತಾವು ನಿರಪರಾಧಿಗಳು ಎಂದು ಸಾಬೀತುಪಡಿಸಲು ಜೈಲಿಗೆ ಹೋಗಲು ಸಿದ್ಧ ಎಂಬ ನಿಲುವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಪಟಿಯಾಲಾ ಹೌಸ್ಕೋರ್ಟ್ನಲ್ಲಿ ಶನಿವಾರ ಶಕ್ತಿ ಪ್ರದರ್ಶನ ಮಾಡಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದ್ದು, ಈ ವೇಳೆ ಭಾರಿ ಸಂಖ್ಯೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿರುವ ಸೋನಿಯಾ ಹಾಗೂ ರಾಹುಲ್ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸದಿದ್ದರೆ, ಕೋರ್ಟ್ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ.