

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಮತದಾರರಾಗಿದ್ದು, ಅವರು ದೆಹಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಮಂಗಳವಾರ ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ದೆಹಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಭ್ಯರ್ಥಿತ್ವವನ್ನು ರದ್ದುಗೊಳಿಸಬೇಕು ಎಂದು ಕೋರಿ ಕಾಂಗ್ರೆಸ್ ಅಭ್ಯರ್ಥಿ ಕಿರಣ್ ವಾಲಿಯಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಚುನಾವಣಾ ಆಯೋಗ ವಜಾಗೊಳಿಸಿದೆ. ತಾನು ದೆಹಲಿಯ ನಿವಾಸಿ ಎಂದು ಘೋಷಿಸುವ ಮೂಲಕ ಕೇಜ್ರಿವಾಲ್ ಅವರು ಸುಳ್ಳು ಹೇಳಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಕೇಜ್ರಿವಾಲ್ ಅವರ ವಾಸಸ್ಥಳಕ್ಕೆ ಸಂಬಂಧಿಸಿದ ವಿವಾದ ಇತ್ಯರ್ಥವಾಗಿದ್ದು, ಜನಪ್ರತಿನಿಧಿ ಕಾಯ್ದೆಯ ಪ್ರಕಾರ ಅವರು ದೆಹಲಿ ಮತದಾರರಾಗಿರುವುದರಿಂದ ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಅರ್ಹರು ಎಂದು ಚುನಾವಣಾ ಆಯೋಗದ ಮೂಲಗಳು ಸ್ಪಷ್ಟಪಡಿಸಿವೆ.
ಇದೇ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ವಿಭು ಬಖ್ರು ಅವರು ಕೇಜ್ರಿವಾಲ್ ಸೇರಿದಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಮತ್ತು ಮುಖ್ಯ ಚುನಾವಣಾ ಅಧಿಕಾರಿಗೆ ನೋಟಿಸ್ ನೀಡಿದ್ದು, ಬುಧವಾರದೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದ್ದಾರೆ.