ದೆಹಲಿ ಫಲಿತಾಂಶ ಆರ್ಥಿಕ ಸುಧಾರಣೆ ಮೇಲೆ ಪರಿಣಾಮ ಬೀರದು: ಜೇಟ್ಲಿ

ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಕೇಂದ್ರ ಸರ್ಕಾರ ಕೈಗೊಳ್ಳುವ ಆರ್ಥಿಕ ಅಭಿವೃದ್ಧಿ ಕಾರ್ಯಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ...
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ (ಸಂಗ್ರಹ ಚಿತ್ರ)
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ (ಸಂಗ್ರಹ ಚಿತ್ರ)

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಕೇಂದ್ರ ಸರ್ಕಾರ ಕೈಗೊಳ್ಳುವ ಆರ್ಥಿಕ ಅಭಿವೃದ್ಧಿ ಕಾರ್ಯಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಗುರುವಾರ ಹೇಳಿದ್ದಾರೆ.

ನವದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಅರುಣ್ ಜೇಟ್ಲಿ, ಸರ್ಕಾರ ಆರ್ಥಿಕಾಭಿವೃದ್ಧಿಯತ್ತ ಚಿಂತಿಸುತ್ತಿದ್ದು, ಆರ್ಥಿಕ ಸುಧಾರಣೆ ಕುರಿತಂತೆ ಸರ್ಕಾರ ಕೈಗೊಂಡಿರುವ ಕಾರ್ಯಗಳು ದೇಶಕ್ಕೆ ಹೂಡಿಕೆಯನ್ನು ತರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಂಡವಾಳ ಹೂಡಿಕೆಯಿಂದ ದೇಶದಲ್ಲಿ ಹೆಚ್ಚೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿದ್ದು, ಜನರ ಜೀವನ ಶೈಲಿ, ಬಡತನ ರೇಖೆಗಿಂತ ಕಡಿಮೆ ಇರುವವರಿಗೆ ಇದು ಸಹಾಯಕವಾಗಲಿದೆ. ಆರ್ಥಿಕ ಸುಧಾರಣೆಯಿಂದ ಬಡತನ ನಿವಾರಣೆ ಹಾಗೂ ಸಾಮಾಜಿಕ ಯೋಜನೆಗಳನ್ನು ಅಭಿವೃದ್ಧಿಪಡಿಸಲು ಸಾಧ್ಯ ಎಂದು ಜೇಟ್ಲಿ ಹೇಳಿದರು.

ಇದೇ ವೇಳೆ ದೆಹಲಿ ಚುನಾವಣಾ ಫಲಿತಾಂಶ ಕುರಿತಂತೆ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳಲ್ಲಿ ನಡೆದ 4 ಚುನಾವಣೆಗಳಲ್ಲಿ ನಾವು ಗೆಲುವು ಸಾಧಿಸಿದ್ದೇವೆ. ಆದರೆ ದೆಹಲಿಯಲ್ಲಿ ಇದೇ ಸಾಧನೆ ಮಾಡುವಲ್ಲಿ ವಿಫಲವಾಗಿದ್ದೇವೆ. ದೆಹಲಿ ಚುನಾವಣಾ ಫಲಿತಾಂಶ ನಮ್ಮ ಅಭಿವೃದ್ಧಿ ಕಾರ್ಯಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಜೇಟ್ಲಿ ಹೇಳಿದ್ದಾರೆ.

ಅಂತೆಯೇ ಕಾಂಗ್ರೆಸ್ ಕುರಿತಂತೆ ಮಾತನಾಡಿರುವ ಅವರು, ರಾಜಧಾನಿಯಲ್ಲಿ ಕಾಂಗ್ರೆಸ್ 15 ವರ್ಷಗಳ ಕಾಲ ಆಡಳಿತ ನಡೆಸಿತ್ತು. ಆದರೆ 2013ರ ರಿಂದೀಚೆಗೆ ದೆಹಲಿಯಲ್ಲಿ ಕಾಂಗ್ರೆಸ್ ಕುಸಿದಿದ್ದು,  ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಸತತ ಪ್ರಯತ್ನ ಮಾಡುತ್ತಲೇ ಇದೆ. ಆದರೂ ಪ್ರಸಕ್ತ ಚುನಾವಣೆಯಲ್ಲಿ ಒಂದೇ ಒಂದು ಸ್ಥಾನವನ್ನೂ ಗಳಿಸಲು ಅದರಿಂದಾಗಲಿಲ್ಲ ಎಂದು ಜೇಟ್ಲಿ ಲೇವಡಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com