
ಪ್ಯಾರಿಸ್: ಪ್ಯಾರಿಸ್‌ನ ಪ್ರತಿಷ್ಟಿತ ರೈಲ್ವೇ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆಯ ಹಿನ್ನಲೆಯಲ್ಲಿ ನಿಲ್ದಾಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಪ್ಯಾರಿಸ್‌ನ ಪ್ರತಿಷ್ಟಿತ the Gare de l'Est ರೈಲ್ವೇ ನಿಲ್ದಾಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಭದ್ರತಾ ಸಿಬ್ಬಂದಿಗಳು ನಿಲ್ದಾಣದಲ್ಲಿ ತೀವ್ರ ಶೋಧ ಕಾರ್ಯ ನಡೆಸಿದ್ದಾರೆ. ಬೆಳಗ್ಗೆ ಸುಮಾರು 8 ಗಂಟೆ ವೇಳೆಗೆ ಭದ್ರತಾ ಪಡೆಗಳಿಗೆ ಈ ಬೆದರಿಕೆ ಸಂದೇಶ ಬಂದಿದ್ದು, ಬೆಳಗ್ಗೆಯಿಂದಲೇ ನಿಲ್ದಾಣವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ ನಿಲ್ದಾಣಕ್ಕೆ ಆಗಮಿಸುವ ಮತ್ತು ಹೊರಹೋಗುವ ಎಲ್ಲ ರೈಲುಗಳನ್ನು ರದ್ದುಗೊಳಿಸಲಾಗಿದೆ.
'ರೈಲ್ವೇ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಲ್ದಾಣವನ್ನು ಸ್ಥಗಿತಗೊಳಿಸಲಾಗಿದೆ. ಭದ್ರತಾ ಪಡೆಗಳು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸಾರ್ವಜನಿಕರು ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ಯಾರಿಸ್ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರು ಹೇಳಿದ್ದಾರೆ.
ಇನ್ನು ಚಾರ್ಲಿ ಹೆಬ್ಡೋ ಪತ್ರಿಕಾ ಕಚೇರಿ ಮೇಲಿನ ದಾಳಿ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಭದ್ರತಾ ಪಡೆಗಳು ಪ್ರಸ್ತುತ 12 ಮಂದಿ ಶಂಕಿತರನ್ನು ವಶಕ್ಕೆ ತೆಗೆದುಕೊಂಡಿವೆ. ನಿನ್ನೆ ದಿಢೀರ್ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ಒಟ್ಟು 9 ಮಂದಿ ಪುರುಷರು ಮತ್ತು 3 ಮಂದಿ ಮಹಿಳೆಯರನ್ನು ವಶಕ್ಕೆ ತೆಗೆದುಕೊಂಡಿದೆ.
ಕಳೆದ ವಾರ ಪ್ಯಾರಿಸ್‌ನ ಚಾರ್ಲಿ ಹೆಬ್ಡೋ ಪತ್ರಿಕೆ ಮೇಲೆ ಮತ್ತು ಆ ಬಳಿಕ ನಡೆದ ಉಗ್ರ ದಾಳಿಯಲ್ಲಿ ಒಟ್ಟು 17 ಮಂದಿ ಮೃತಪಟ್ಟಿದ್ದರು.
Advertisement