

ನವದೆಹಲಿ: ವ್ಯಾಪಂ ಹಗರಣವನ್ನು ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದ ನಂತರ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಅಧಿಕಾರದಲ್ಲಿ ಮುಂದುವರೆಯು ನೈತಿಕತೆ ಇಲ್ಲ. ಹೀಗಾಗಿ ಅವರು ಈ ಕೂಡಲೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷ ಆಗ್ರಹಿಸಿವೆ.
ನಿಗೂಢ ಸಾವಿನ ಮೂಲಕ ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ವ್ಯಾಪಂ ಹಗರಣಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಿರುವ ಸುಪ್ರೀಂ ಕೋರ್ಟ್ ನಿರ್ಧಾರವನ್ನು ಎರಡೂ ಪಕ್ಷಗಳು ಸ್ವಾಗತಿಸಿವೆ.
'ನೊಂದವರಿಗೆ ನ್ಯಾಯ ಸಿಕಬೇಕಾದ್ರೆ ಮತ್ತು ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕಾದರೆ ಮುಖ್ಯಮಂತ್ರಿಗಳು ರಾಜಿನಾಮೆ ನೀಡಲೆಬೇಕು. ಒಂದು ವೇಳೆ ಆರೋಪ ಮುಕ್ತರಾದರೆ ಅವರು ಮತ್ತೆ ಸಿಎಂ ಆಗಲಿ' ಎಂದು ಕಾಂಗ್ರೆಸ್ ವಕ್ತಾರ ಟಾಮ್ ವಡಕ್ಕನ್ ಅವರು ಹೇಳಿದ್ದಾರೆ.
ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ ತನಿಖಾ ಸಂಸ್ಥೆಗಳ ತನಿಖೆಯ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕೂಡಲೇ ಚೌಹಾಣ್ ಅವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಮ್ ಆದ್ಮಿ ಪಕ್ಷದ ವಕ್ತಾರ ಆಶಿಶ್ ಖೆತನ್ ಅವರು ಒತ್ತಾಯಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಅವರ ಸರ್ಕಾರದ ವಿರುದ್ಧವೇ ಎಲ್ಲಾ ಆರೋಪಗಳು ಕೇಳಿಬಂದಿವೆ. ಅಲ್ಲದೆ ರಾಜ್ಯದ ತನಿಖಾ ಸಂಸ್ಥೆಗಳು ಇದುವರೆಗೆ ನಡೆಸಿದ ತನಿಖೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದೆ. ಹೀಗಾಗಿ ಚೌಹಾಣ್ ಅವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ ಎಂದು ಹೇಳಿದ್ದಾರೆ.