ಮತ್ತೆ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಯೋಜನೆ

ಲೋಕಸಭಾ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿ, ಸೋಲು ಕಂಡಿದ್ದ ಕಾಂಗ್ರೆಸ್ ಪಕ್ಷ ಇದೀಗ ಅಧಿಕಾರಕ್ಕೆ ಬರುವ ಸಲುವಾಗಿ ನಾನಾ ಪ್ರಯತ್ನ ಮಾಡುತ್ತಿದ್ದು, ಪಕ್ಷದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸುತ್ತಿದೆ...
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿ, ಸೋಲು ಕಂಡಿದ್ದ ಕಾಂಗ್ರೆಸ್ ಪಕ್ಷ ಇದೀಗ ಅಧಿಕಾರಕ್ಕೆ ಬರುವ ಸಲುವಾಗಿ ನಾನಾ ಪ್ರಯತ್ನ ಮಾಡುತ್ತಿದ್ದು, ಪಕ್ಷದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸುತ್ತಿದೆ.

ಪಕ್ಷದ ಅಭಿವೃದ್ಧಿಗಾಗಿ ಇತ್ತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಜನರ ಗಮನ ಸೆಳೆಯಲು ಪ್ರಯತ್ನ ನಡೆಸುತ್ತಿದ್ದರೆ, ಅತ್ತ ಸೋನಿಯಾ ಗಾಂಧಿ ಅವರು, ಪಕ್ಷದ ಆಂತರಿಕ ಅಭಿವೃದ್ಧಿಯತ್ತ ಗಮನಹರಿಸುತ್ತಿದ್ದಾರೆ.

ಪಕ್ಷ ಯೋಜನೆಯಂತೆ ಕೇರಳ, ಕರ್ನಾಟಕ, ಅಸ್ಸಾಂ, ಹಿಮಾಚಲ, ಉತ್ತರಪ್ರದೇಶ, ಮಣಿಪುರ, ಮಿಜೋರಾಂ ಸೇರಿದಂತೆ ಅರುಣಾಚಲ ಪ್ರದೇಶ, ಮೇಘಾಲಯ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ, ಇದೀಗ ಈ ಎಲ್ಲಾ 9 ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದು, ಜೂನ್ 9 ಸಭೆ ನಡೆಸಲು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಈ ಸಭೆಯ ನಂತರ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ನೇತೃತ್ವದಲ್ಲಿ ಪಕ್ಷದ ಎಲ್ಲಾ ಸದಸ್ಯರನ್ನೊಳಗೊಂಡ ಸಭೆಯನ್ನು ಆಯೋಜಿಸಿಲಾಗಿದ್ದು, ಈ ಸಭೆಯ ದಿನಾಂಕವನ್ನು ಜೂನ್ 9ರಂದು ನಡೆಯುವ ಮುಖ್ಯಮಂತ್ರಿಗಳ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಮಾಜಿ ರಕ್ಷಣಾ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎ.ಕೆ.ಆ್ಯಂಟನಿ ಹೇಳಿದ್ದಾರೆ.

ಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಸ್ತುತ ಪ್ರಚಲಿತದಲ್ಲಿರುವ ವಿಷಯಗಳನ್ನು ಚರ್ಚಿಸಲಿದ್ದು, ಪಕ್ಷಕ್ಕೆ ಸಂಬಂಧಿಸಿದಂತೆ ಹಾಗೂ ರಾಜಕೀಯ ವಲಯದ ಬೆಳವಣಿಗೆಗೆ, ಯುಪಿಎ ಸರ್ಕಾರ ಅಧಿಕಾರದಲ್ಲಿ ಜಾರಿಯಾದ ಯೋಜನೆಗಳು ಹಾಗೂ ಜನ ಕಲ್ಯಾಣ ಯೋಜನೆ ಕುರಿತಂತೆ ಚರ್ಚೆ ನಡೆಸಲಾಗುವುದು. ಸಭೆಯಲ್ಲಿ ಎಲ್ಲಾ ಮುಖ್ಯಮಂತ್ರಿಗಳು ತಮ್ಮ ಸರ್ಕಾರದ ಕಲ್ಯಾಣ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತಂತೆ ತಮ್ಮ ಅಭಿಪ್ರಾಯಗಳನ್ನು ನೀಡಬೇಕಿದ್ದು, ಪಕ್ಷದ ಅಭಿವೃದ್ಧಿ ಕುರಿತಂತೆ ಹಾಗೂ ಪ್ರಮುಖವಾಗಿ ಸರಕು ಮತ್ತು ಸೇವಾ ತೆರಿಗೆ ವಿಷಯ ಕುರಿತಂತೆ ಚರ್ಚೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಅಧಿವೇಶನ ಕುರಿತಂತೆ ಮಾತನಾಡಿರುವ ಅವರು, ಅಧಿವೇಶನ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಆ ಬಗ್ಗೆ ಖಚಿತ ಮಾಹಿತಿ ತಿಳಿದುಬಂದಿಲ್ಲ. ಈ ಕುರಿತ ನಿರ್ಧಾರವನ್ನು ಪಕ್ಷ ಇನ್ನೂ ತೀರ್ಮಾನಿಸಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com