ಗೋವಿಗೆ 'ರಾಷ್ಟ್ರೀಯ ಪ್ರಾಣಿ' ಸ್ಥಾನ?

ಭಾರತದಲ್ಲಿ ಗೋವುಗಳ ಸಂಖ್ಯೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಗೋವುಗಳ ರಕ್ಷಣೆಗಾಗಿ ಕೇಂದ್ರ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ...
ಗೋವು
ಗೋವು

ಭಾರತದಲ್ಲಿ ಗೋವುಗಳ ಸಂಖ್ಯೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹಿಂದೂಗಳ ಪೂಜನೀಯವಾಗಿರುವ ಗೋವುಗಳ ರಕ್ಷಣೆಗಾಗಿ ಕೇಂದ್ರ ಸರ್ಕಾರ ಮುಂದಾಗಿದ್ದು, ನಿಟ್ಟಿನಲ್ಲಿ ಗೋವಿಗೆ 'ರಾಷ್ಟ್ರೀಯ ಪ್ರಾಣಿ' ಎಂದು ಘೋಷಿಸುವ ಸಾಧ್ಯತೆ ಇದೆ. ಸದ್ಯದಲ್ಲಿಯೇ ಅಂತಿಮ ತೀರ್ಮಾನ ಹೊರ ಬೀಳಲಿದೆ ಎಂದು ಹೇಳಲಾಗುತ್ತಿದೆ.

ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯ ಸಂತತಿ ಕ್ಷೀಣಿಸುತ್ತಿದ್ದ ಸಂದರ್ಭದಲ್ಲಿ ಹುಲಿಗೆ ರಾಷ್ಟ್ರೀಯ ಪ್ರಾಣಿ ಸ್ಥಾನ ನೀಡಿದ ನಂತರ ದೇಶದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಅದೇ ರೀತಿ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿಸಿ ಗೋ ಸಂತತಿಯನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

ಸಾಧ್ವಿ ರಿತಂಬರ ನೇತೃತ್ವದ ನಿಯೋಗವೊಂದು ಇತ್ತೀಚೆಗಷ್ಟೇ ಹುಲಿಗೆ ಬದಲಾಗಿ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಪರಿಗಣಿಸಿ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಪ್ರಕಾಶ್ ಜಾವೇಡ್ಕರ್ ಅವರಿಗೆ ಮನವಿ ಪತ್ರ ಸಲ್ಲಿಸಿತ್ತು. ಸಾಧುಗಳ ಮನವಿಯನ್ನು ಗಂಭೀರವಾಗಿ ಪರಿಗಣಿಸಿರುವ ಜಾವೇಡ್ಕರ್ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದು ಇದರ ಸಾಧಕ-ಬಾಧಕಗಳ ಬಗ್ಗೆ ಉತ್ತರ ನೀಡುವಂತೆ ಸೂಚಿಸಿದ್ದು ಸದ್ಯದಲ್ಲಿಯೇ ಈ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಗೋವಿಗೆ ರಾಷ್ಟ್ರೀಯ ಸ್ಥಾನ ನೀಡುವ ವಿಚಾರವಾಗಿ ಆರ್‌ಎಸ್‌ಎಸ್ ಸಹ  ಬೆಂಬಲಿಸಿದ್ದು ದೇಶದಲ್ಲಿ ಗೋವುಗಳ ಸಂತತಿ ಕ್ಷೀಣಿಸುತ್ತಿದೆ. ಕೆಲವು ರಾಜ್ಯಗಳಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿದ್ದರೂ ಇನ್ನು ಕೆಲವು ರಾಜ್ಯಗಳಲ್ಲಿ ಇದು ಚಾಲ್ತಿಯಲ್ಲಿದೆ. ಹಾಗಾಗಿ ಈ ನಿಟ್ಟಿನಲ್ಲಿಯಾದರೂ ಗೋವುಗಳ ರಕ್ಷಣೆಗೆ ಮುಂದಾಗಬೇಕೆಂದು ಆರ್‌ಎಸ್‌ಎಸ್  ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com