
ನವದೆಹಲಿ: ಎನ್ ಡಿಎ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ ಕೆಲವು ಗಂಟೆಗಳ ಬಳಿಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಮೋದಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಸಿಂಗ್ ಅವರು ಆರ್ಥಿಕ ಹಾಗೂ ವಿದೇಶಾಂಗ ನೀತಿಗಳ ಕುರಿತಂತೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಮೂಲಗಳ ಪ್ರಕಾರ ಆರ್ಥಿಕ ಮತ್ತು ವಿದೇಶಾಂಗ ನೀತಿಗಳ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಮಾಜಿ ಪ್ರಧಾನಿ ಸಿಂಗ್ ಅವರಿಗೆ ಆಹ್ವಾನ ನೀಡಿದ್ದರು. ಆದರೆ, ಈ ಆಹ್ವಾನವು ಮಂಗಳವಾರ ನಿಗದಿಯಾಗಿತ್ತು. ಕಾರಣಾಂತರಗಳಿಂದ ಸಿಂಗ್ ಅವರು ಭೇಟಿ ನೀಡಲು ಸಾಧ್ಯವಾಗಿಲ್ಲ. ಆದ್ದರಿಂದ ಆಹ್ವಾನವನ್ನು ಬುಧವಾರ ಸಂಜೆಗೆ ನಿಗದಿ ಮಾಡಲಾಗಿತ್ತು ಎಂದು ತಿಳಿದುಬಂದಿದೆ.
ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿರುವ ಕುರಿತಂತೆ ಸ್ವತಃ ನರೇಂದ್ರ ಮೋದಿ ಅವರೇ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದು, ಟ್ವೀಟ್ ನಲ್ಲಿ 7ಆರ್ ಸಿಆರ್ ಗೆ ಮರಳಿ ಭೇಟಿ ನೀಡಿರುವ ಮನಮೋಹನ್ ಸಿಂಗ್ ಅವರಿಗೆ ಸ್ವಾಗತ, ಸಿಂಗ್ ಅವರನ್ನು ಭೇಟಿ ಮಾಡಿದ್ದು ಹಾಗೂ ಅವರೊಡನೆ ಚರ್ಚೆ ನಡೆಸಿದ್ದು ಬಹಳ ಸಂತೋಷ ತಂದಿದೆ ಎಂದು ಹೇಳಿದ್ದಾರೆ.
ನಿನ್ನೆಯಷ್ಟೇ ತಮ್ಮ ವಿರುದ್ಧ ಕೇಳಿ ಬಂದ ಆರೋಪಗಳಿಗೆ ಮೊದಲ ಬಾರಿ ಮೌನ ಮುರಿದಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ, ಕೇಂದ್ರ ಎನ್ ಡಿಎ ಸರ್ಕಾರ ವಿರುದ್ಧ ವಾಗ್ಧಾಳಿ ನಡೆಸಿದ್ದರು. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದಿಂದ ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳು ಬೆದರಿಕೆಯ ನೆರಳಿನಲ್ಲಿ ಕೆಲಸ ಮಾಡಬೇಕಿದೆ. ಬಿಜೆಪಿ ಸರ್ಕಾರವು ಭ್ರಷ್ಟಾರದಲ್ಲಿ ಮುಳುಗಿದ್ದು, ದೇಶದ ಜನತೆಯ ಗಮನ ಬೇರೆಡೆ ಸೆಳೆಯಲು ಅನಾವಶ್ಯಕ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತಿದೆ. ಯುಪಿಎ ಸರ್ಕಾರದ ಯೋಜನಗಳಿಗೆ ಮರುನಾಮಕರಣ ಮಾಡಿ ತಮ್ಮದೇ ಯೋಜನೆ ಎಂದು ಎನ್ ಡಿಎ ಸರ್ಕಾರ ತೋರ್ಪಡಿಸುಕೊಳ್ಳುತ್ತಿದೆ ಎಂದು ಹೇಳಿದ್ದರು.
Advertisement