ಅಸಹಿಷ್ಣುತೆ ವಿರುದ್ಧ ಕಾಂಗ್ರೆಸ್ ನಾಯಕರಿಂದ ರಾಷ್ಟ್ರಪತಿಗೆ ದೂರು
ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ವಿರುದ್ಧ ಕಾಂಗ್ರೆಸ್ ನಾಯಕರು ಮಂಗಳವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ದೂರು ನೀಡಿದ್ದಾರೆ.
ಸಾಹಿತಿಗಳ ಹತ್ಯೆ ಹಾಗೂ ಅಸಹಿಷ್ಣುತೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕರು ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಂಸತ್ ಭವನದಿಂದ ರಾಷ್ಟ್ರಪತಿ ಭವನದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬಳಿಕ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ದೂರು ನೀಡಿದರು. ಅಲ್ಲದೆ, ಸಾಂವಿಧಾನಿಕ ಅಧಿಕಾರವನ್ನು ಬಳಸಿ ಅಸಹಿಷ್ಣುತೆ ವಾತಾವರಣಕ್ಕೆ ತೆರೆ ಎಳೆಯಬೇಕು ಎಂದು ಮನವಿ ಮಾಡಿದರು.
ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಅಸಹಿಷ್ಣುತೆ ಹೆಚ್ಚಾಗಿದೆ. ಇದಕ್ಕೆ ಬಿಜೆಪಿ ಹಾಗೂ ಸಂಘ ಪರಿವಾರ ಕಾರಣ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಕಾಂಗ್ರೆಸ್ ಹಲವು ಹಿರಿಯ ನಾಯಕರು, ಸಂಸದರು ಈ ವೇಳೆ ಉಪಸ್ಥಿತರಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ