

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಪಾಕಿಸ್ತಾನಕ್ಕೆ ತೆರಳಿದ್ದ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅಲ್ಲಿನ ಮಾಧ್ಯಮಗಳಿಗೆ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಮಣಿಶಂಕರ್ ಅಯ್ಯರ್, ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಲು ಬಯಸುತ್ತಿದೆ. ಪಾಕಿಸ್ತಾನದೊಂದಿಗೆ ಭಾರತದ ಮಾತುಕತೆ ಮುಂದುವರೆಯಬೇಕೆಂದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆಳಗಿಳಿಸಬೇಕು. ಅದಕ್ಕೆ ಪಾಕಿಸ್ತಾನ ಕಾಂಗ್ರೆಸ್ ಗೆ ಸಹಾಯ ಮಾಡಬೇಕೆಂದು ಹೇಳಿದ್ದರು.
ಮಣಿಶಂಕರ್ ಅಯ್ಯರ್ ಹೇಳಿಕೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿರುವ ಮಣಿಶಂಕರ್ ಅಯ್ಯರ್ ಅವರನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಲೇ ಕಾಂಗ್ರೆಸ್ ನಿಂದ ವಜಾಗೊಳಿಸಬೇಕು. ಅಲ್ಲದೇ ಅಯ್ಯರ್ ಹೇಳಿಕೆ ಬಗ್ಗೆ ಸೋನಿಯಾ ಗಾಂಧಿ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಪಾಕಿಸ್ತಾನದಲ್ಲಿ ಪ್ರಧಾನಿ ಬಗ್ಗೆ ಮಾಜಿ ಕೇಂದ್ರ ಸಚಿವರು ಹೇಳಿಕೆ ನೀಡಿರುವುದು ನಿಜಕ್ಕೂ ಆತಂಕಕಾರಿ ಸಂಗತಿ ಸಲ್ಮಾನ್ ಖುರ್ಷಿದ್ ಹಾಗೂ ಮಣಿಶಂಕರ್ ಅಯ್ಯರ್ ಅಪರಾಧಿ ಪ್ರವೃತ್ತಿಯವರಾಗಿದ್ದಾರೆ ಎಂದು ಸಂಬಿತ್ ಪಾತ್ರ ಹೇಳಿದ್ದಾರೆ.