

ಪಾಟ್ನಾ: ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ.
ನವೆಂಬರ್ 20 ರಂದು ಗಾಂಧಿ ಮೈದಾನದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬರುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಮೂಲಕ ನಿತೀಶ್ ಕುಮಾರ್ ಆಹ್ವಾನ ನೀಡಿದ್ದಾರೆ.
ನಾಲ್ಕು ದಿನಗಳ ಛಾತ್ ಹಬ್ಬ ಇಂದು ಬೆಳಗ್ಗೆ ಮುಕ್ತಾಯವಾಗಿದ್ದು, ಪ್ರಮುಖ ನಾಯಕರಿಗೆ ನಿತೀಶ್ ಕುಮಾರ್ ತಾವೇ ದೂರವಾಣಿ ಕರೆ ಮಾಡಿ ಆಹ್ವಾನ ನೀಡಿದ್ದಾರೆ.
ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ ನೀಡಿದ್ದಾರೆ. ಆದರೆ ಮೋದಿ ಅವರು ರಾಜಕೀಯ ಶಿಷ್ಟಾಚಾರದಂತೆ ಕಾರ್ಯಕ್ರಮಕ್ಕೆ ಬರುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕು ಎಂದು ಬಿಹಾರ ಜೆಡಿಯು ಅಧ್ಯಕ್ಷ ಬಸಿಷ್ಟ ನಾರಾಯಣ್ ಸಿಂಗ್ ಹೇಳಿದ್ದಾರೆ.
ಪ್ರಧಾನಿ ಅವರಿಗೆ ಪೂರ್ವ ನಿಯೋಜಿತ ಕಾರ್ಯಕ್ರಮಗಳಿರುವುದರಿಂದ ಮೋದಿ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ಬಿಹಾರ ಬಿಜೆಪಿ ಉಪಾಧ್ಯಕ್ಷ ಸಂಜಯ್ ಮಯೂಕ್ ಹೇಳಿದ್ದಾರೆ.