

ಕಾಬೂಲ್: ಅಫ್ಘಾನಿಸ್ಥಾನದಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಕಟ್ಟಡದಿಂದ ಹೊರಬರುಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದ್ದು, ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 18 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ.
ಅಫ್ಘಾನಿಸ್ಥಾನದ ಟಖರ್ ನಲ್ಲಿರುವ ತಲುಕಾನ್ ಸಿಟಿಯಲ್ಲಿ ಕಾಲ್ತುಳಿತ ಸಂಭವಿಸಿರುವುದಾಗಿ ತಿಳಿದುಬಂದಿದ್ದು, ಭೂಕಂಪ ಸಂಭವಿಸುತ್ತಿದ್ದಂತೆ ಶಾಲೆಯಲ್ಲಿದ್ದ ವಿದ್ಯಾರ್ಥಿಗಳು ಕೂಡಲೇ ಶಾಲಾ ಕಟ್ಟಡದಿಂದ ಹೊರಬರಲು ಪ್ರಾರಂಭಿಸಿದ್ದಾರೆ. ಈ ವೇಳೆ ಹೊರಬರುವ ತರಾತುರಿಯಲ್ಲಿ ವಿದ್ಯಾರ್ಥಿಗಳು ಶಾಲಾ ಬಾಗಿಲ ಬಳಿ ಮುಗಿಬಿದ್ದಿದ್ದಾರೆ. ಇದರಿಂದಾಗಿ ಕಾಲ್ತುಳಿತ ಆರಂಭವಾಗಿ ವಿದ್ಯಾರ್ಥಿಗಳು ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದು, 35 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.
ಇದರಂತೆ ಪಾಕಿಸ್ತಾನದಲ್ಲೂ ಹಲವೆಡೆ ಪ್ರಬಲ ಭೂಕಂಪವಾಗಿದ್ದು, ಪರಿಣಾಮ 18 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 69ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲವರು ಧರೆಗುರುಳಿದ ಕಟ್ಟಡದ ಅವಶೇಷಗಳಡಿ ಸಿಲುಕಿರುವುದಾಗಿ ಅಧಿಕಾರಿಗಳು ತಿಳಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ತಿಳಿದುಬಂದಿದೆ.