

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಹೊರಡಿಸುವ ಅಕ್ರಮ ಆದೇಶಗಳನ್ನು ಪಾಲಿಸದಂತೆ ದೆಹಲಿ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.
ಐಎಎಸ್, ಡಿಎಎನ್ಐಸಿಎಸ್ ಸೇರಿದಂತೆ ಎಲ್ಲಾ ಸರ್ಕಾರಿ ಅಧಿಕಾರಿಗಳಿಗೂ ನಜೀಬ್ ಜಂಗ್, ಆದೇಶ ಪಾಲಿಸದೇ ಇದ್ದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ದೆಹಲಿಯಲ್ಲಿ ಸಂವಿಧಾನ, ಕಾನೂನು ಮತ್ತು ನಿಯಮಗಳ ಉಲ್ಲಂಘನೆಯಾಗುತ್ತಿರುವುದನ್ನು ಕೇಂದ್ರ ಸರ್ಕಾರ ಗಮನಿಸಿದೆ. ಸರ್ಕಾರದ ನಿರ್ಧಾರಗಳನ್ನು ಕೇಂದ್ರ ಸರ್ಕಾರ ಅಕ್ರಮ ಎಂದು ಹೇಳಿದೆ. ಆದ್ದರಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರ ಹೊರಡಿಸುವ ಅಕ್ರಮ ಆದೇಶಗಳನ್ನು ಪಾಲಿಸಬಾರದೆಂದು ನಜೀಬ್ ಜಂಗ್ ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ನಜೀಬ್ ಜಂಗ್ ಹಾಗೂ ಅರವಿಂದ್ ಕೇಜ್ರಿವಾಲ್ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ. ನಜೀಬ್ ಜಂಗ್ ಅವರು ಕೇಂದ್ರ ಸರ್ಕಾರದ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದರು.