

ನವದೆಹಲಿ: ಕೇಂದ್ರ- ದೆಹಲಿ ಸರ್ಕಾರದ ನಡುವಿನ ಭಿನ್ನಾಭಿಪ್ರಾಯಗಳನ್ನು ಶೀಘ್ರವೇ ಬಗೆಹರಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.
ಮೋದಿಗೆ ಪತ್ರ ಬರೆದಿರುವ ಕೇಜ್ರಿವಾಲ್, ದೆಹಲಿ ಹಾಗೂ ಕೇಂದ್ರ ಸರ್ಕಾರದ ನಡುವೆ ಇರುವ ಭಿನ್ನಾಭಿಪ್ರಾಯದ ಬಗ್ಗೆ ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಭಿನ್ನಾಭಿಪ್ರಾಯಗಳ ಬಗ್ಗೆ ಸುಪ್ರೀಂ ಕೋರ್ಟ್ ಆತಂಕ ವ್ಯಕ್ತಪಡಿಸಿದೆ ಎಂದು ತಿಳಿಸಿದ್ದಾರೆ. ಇಬ್ಬರೂ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಕೇಜ್ರಿವಾಲ್ ಒತ್ತಾಯಿಸಿದ್ದಾರೆ.
ಪಿಐಎಲ್ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೆಲವು ವಿಷಯಗಳ ಬಗ್ಗೆ ಅವಲೋಕನ ನಡೆಸಿದ್ದು, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ. ಇದು ಆಡಳಿತಾತ್ಮಕ ವಿಷಯಗಳಿಗೆ ಸಂಬಂಧಿಸಿದ ಸಮಸ್ಯೆ. ಪರಸ್ಪರ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.