ಶ್ರೀನಗರ: ರಾಷ್ಟ್ರೀಯ ತಾಂತ್ರಿಕ ಸಂಸ್ಥೆ (ಎನ್ ಐಟಿ)ಯಲ್ಲಿ ವಿದ್ಯಾರ್ಥಿಗಳ ನಡುವೆ ನಡೆದ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಸಂಪನ್ಮೂಲ ಸಚಿವಾಲಯವು ಇಬ್ಬರು ಸದಸ್ಯರ ತಂಡವೊಂದನ್ನು ಬುಧವಾರ ಎನ್ ಐಟಿಗೆ ರವಾನೆ ಮಾಡಿದೆ.
ಟಿ20 ವಿಶ್ವಕಪ್ ಭಾರತ- ವೆಸ್ಟ್ ಇಂಡೀಸ್ ಪಂದ್ಯದಲ್ಲಿ ಭಾರತ ಸೋಲು ಕಂಡ ನಂತರ ಎನ್ಐಟಿಯಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ಏರ್ಪಟ್ಟಿತ್ತು. ಈ ಘರ್ಷಣೆ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಅಲ್ಲದೆ, ಇದೀಗ ಮತ್ತೆ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಕೆಲ ವಿದ್ಯಾರ್ಥಿಗಳು ಸಂಘಟನೆಗಳು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಹೆಚ್ಚಿನ ಭದ್ರತೆಯನ್ನು ನಿಯೋಜಿಸಿರುವ ಅಧಿಕಾರಿಗಳು ಪೊಲೀಸರು ಹಾಗೂ ಸಿಆರ್ ಪಿಎಫ್ ಯೋಧರನ್ನು ನಿಯೋಜಿಸಿದ್ದಾರೆ.
ರಾಷ್ಟ್ರೀಯ ತಾಂತ್ರಿಕ ಸಂಸ್ಥೆಯ ಆವರಣದಲ್ಲಿ ನಿರ್ಮಾಣವಾಗಿರುವ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಮಾನವ ಸಂಪನ್ಮೂಲ ಸಚಿವಾಲಯ ಮಧ್ಯೆ ಪ್ರವೇಶಿಸಿದ್ದು, ಎರಡು ಸದಸ್ಯರ ತಂಡವೊಂದನ್ನು ರಚಿಸಿ ಕಾಲೇಜು ಆವರಣಕ್ಕೆ ಕಳುಹಿಸಿಕೊಟ್ಟಿದೆ ಎಂದು ತಿಳಿದುಬಂದಿದೆ.
ಇನ್ನು ಘಟನೆ ನಡೆದು ವಾರ ಕಳೆದರೂ ವಿದ್ಯಾರ್ಥಿಗಳು ಮಾತ್ರ ಕಾಲೇಜಿನಲ್ಲಿ ನಮಗೆ ಸುರಕ್ಷಿತವಿಲ್ಲ ಎಂದು ಹೇಳಿ ಕಾಲೇಜು ಬಿಡುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆಂದು ಹೇಳಲಾಗುತ್ತಿದೆ. ಹೀಗಾಗಿ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಜಮ್ಮು-ಕಾಶ್ಮೀರ ಸರ್ಕಾರ, ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ಭದ್ರತೆಯನ್ನು ಒದಗಿಸುತ್ತೇವೆಂದು ಹೇಳಿದ್ದಾರೆ. ಅಲ್ಲದೆ, ಆಡಳಿತ ಮಂಡಳಿ ಸಮಸ್ಯೆ ಬಗೆಹರಿಸುವ ಸಲುವಾಗಿ ಈಗಾಗಲೇ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿದೆ. ಸಭೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಮುಂದೂಡುವಂತೆ ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳ ಮನವಿಯನ್ನು ಸ್ವೀಕರಿಸಲಾಗಿದೆ ಎಂದು ಹೇಳಿದ್ದಾರೆ.
ಎನ್ ಐಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳುತ್ತೇವೆ. ಸ್ಥಳದಲ್ಲಿ ಎಲ್ಲಾ ರೀತಿಯ ಭದ್ರತೆಯನ್ನು ಒದಗಿಸಲಾಗಿದೆ ಎಂದು ಜಮ್ಮ ಕಾಶ್ಮೀರ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರು ಹೇಳಿದ್ದರು. ಇದರಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರೊಂದಿಗೆ ಚರ್ಚೆ ನಡೆಸಿದ್ದು, ಕಾಲೇಜು ಆವರಣ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ನಡೆದ ಟಿ-20 ವಿಶ್ವಕಪ್ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಪರಾಭವ ಕಂಡಿದ್ದಕ್ಕೆ ವಿದ್ಯಾರ್ಥಿಗಳ ಗುಂಪೊಂದು ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಿತ್ತು. ಇದಕ್ಕೆ ಕೆಲ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ಏರ್ಪಟ್ಟಿತ್ತು. ವಿದ್ಯಾರ್ಥಿಗಳನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಮಧ್ಯೆ ಪ್ರವೇಶ ಮಾಡಿದ್ದರು. ಅಲ್ಲದೆ, ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಸಾಕಷ್ಟು ವಿದ್ಯಾರ್ಥಿಗಳು ಗಾಯಗೊಂಡಿದ್ದರು.
Advertisement