ಅಹಮದಾಬಾದ್: ವಿಜಯ್ ರೂಪಾನಿ ಅವರು ಭಾನುವಾರ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷ ಶನಿವಾರ ಘೋಷಿಸಿದೆ.
ವಿಜಯ್ ರೂಪಾನಿ ಅವರು ಮುಖ್ಯಮಂತ್ರಿಯಾಗಿ ಹಾಗೂ ನಿತಿನ್ ಪಟೇಲ್ ಅವರು ಉಪ ಮುಖ್ಯಮಂತ್ರಿಯಾಗಿ ನಾಳೆ 12.40ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ದಿನೇಶ್ ಶರ್ಮಾ ಅವರು ತಿಳಿಸಿದ್ದಾರೆ.
ನಿಯೋಜಿತ ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ವಿಜಯ್ ರೂಪಾನಿ ಅವರು ಇಂದು ಬೆಳಗ್ಗೆ ರಾಜ್ಯಪಾಲ ಒ.ಪಿ.ಕೊಹ್ಲಿ ಅವರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದರು.
ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್ ರೂಪಾನಿಗೆ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಆರೋಗ್ಯ ಸಚಿವ ನಿತಿನ್ ಪಟೇಲ್ ಅವರು ಸಾಥ್ ಸಹ ನೀಡಿದರು.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ನೇತೃತ್ವದಲ್ಲಿ ನಡೆದ ಗುಜರಾತ್ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ರೂಪಾನಿ ಅವರನ್ನು ರಾಜ್ಯದ ಅತ್ಯುನ್ನತ ಹುದ್ದೆಗೆ ಆಯ್ಕೆ ಮಾಡಲಾಗಿತ್ತು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ನಿತಿನ್ ಗಡ್ಕರಿ ಅವರು, ವಿಜಯ್ ರೂಪಾನಿ ಅವರನ್ನು ಪಕ್ಷದ ಶಾಸಕರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದ್ದರು.
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಆನಂದಿ ಬೇನ್ ಸಂಪುಟದಲ್ಲಿ ಸಾರಿಗೆ ಸಚಿವರಾಗಿದ್ದ ರೂಪಾನಿ ಅವರು 2014ರಲ್ಲಿ ಕರ್ನಾಟಕ ರಾಜ್ಯಪಾಲರಾಗಿ ನೇಮಕಗೊಂಡ ವಜುಭಾಯಿ ವಾಲಾ ಅವರಿಂದ ತೆರವಾದ ರಾಜಕೋಟ್ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.