

ನವದೆಹಲಿ: ನಕಲಿ, ಸ್ವಯಂ ಘೋಷಿತ ಗೋರಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತರಾದ ತೆಹಸೀನ್ ಎಸ ಪುನಾವಾಲಾ ಎಂಬುವವರು ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಸ್ವಯಂ ಘೋಷಿತ ಗೋರಕ್ಷಕರು ಗಲಭೆ ಹಾಗೂ ದಲಿತರ ಮೇಲಿನ ದೌರ್ಜನ್ಯಗಳನ್ನು ಹರಡುವಂತೆ ಮಾಡುತ್ತಿದ್ದು ಇಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸ್ವಯಂ ಘೋಷಿತ ಗೋರಕ್ಷಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿದ್ದಾರೆ ಎಂದು ಹೇಳಿದ್ದರು, ಸ್ವಯಂ ಘೋಷಿತ ಗೋರಕ್ಷಕರು ಸಮಾಜದಲ್ಲಿನ ಶಾಂತಿಯನ್ನು ಕದಡುತ್ತಿದ್ದು ಕೇಂದ್ರ ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ.