

ನವದೆಹಲಿ: ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದೇ ದೊಡ್ಡ ಪ್ರಮಾದ ಎಂದು ಕಾಂಗ್ರೆಸ್ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಹೇಳಿದ್ದಾರೆ.
ಖಾಸಗಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ದೇಶದ್ರೋಹಿ ಘೋಷಣೆ ಕೂಗುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿರಲಿಲ್ಲ. ಯಾರಾದರೂ ಉದ್ದೇಶ ಪೂರ್ವಕವಾಗಿ ಘೋಷಣೆಗಳನ್ನು ಕೂಗಿದರೆ ಅಥವಾ ಕೂಗುವಂತೆ ಪ್ರೇರೇಪಿಸಿದರೆ ಖಂಡಿತಾ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬಹುದು. ಆದರೆ ಬೆಂಗಳೂರು ಪ್ರಕರಣದಲ್ಲಿ ಅಮ್ನೆಸ್ಟಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವುದು ದೊಡ್ಡ ಪ್ರಮಾದ ಎಂದು ಹೇಳಿದ್ದಾರೆ.
ನನ್ನ ಪ್ರಕಾರ, ಕೆಲವರ ಘೋಷಣೆಗಳಿಂದ ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಅಮ್ನೆಸ್ಟಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವುದು ತಪ್ಪು. ಇದು ತಪ್ಪು ಎಂದು ತಿಳಿದಿರುವ ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಅವರು ಕೂಡ ಅಮ್ನೆಸ್ಟಿ ವಿರುದ್ಧದ ಪ್ರಕರಣ ಕೈಬಿಡಲು ನಿರ್ಧರಿಸಿದ್ದಾರೆ. ಸುಳ್ಳು ಆರೋಪಗಳನ್ನು ಹಿಡಿದು ಅದರ ಸುತ್ತಲೇ ಸುತ್ತುವುದಕ್ಕಿಂತ ಇದನ್ನು ಇಲ್ಲಿಯೇ ಬಿಟ್ಟು ನಾವು ಮುಂದೆ ಹೋಗಬೇಕು ಎಂದು ತರೂರ್ ಹೇಳಿದ್ದಾರೆ.
ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಅವರು ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿಕೆ ನೀಡುವ ಮೂಲಕ ಅದರ ವಿರುದ್ಧದ ಪ್ರಕರಣವನ್ನು ಕೈಬಿಡುವ ಮುನ್ಸೂಚನೆ ನೀಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಇದಕ್ಕೆ ಪ್ರತಿಕ್ರಿಯಿಸಿ ಕೆಲ ರಾಜಕೀಯ ಪಕ್ಷಗಳು ತಮ್ಮ ಸ್ವಹಿತಾಸಕ್ತಿಗಾಗಿ ವೋಟ್ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿವೆ ಎಂದು ಆರೋಪಿಸಿದ್ದರು.