

ನವದೆಹಲಿ: ನೋಟು ನಿಷೇಧ ಮಾಡಿದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ದಾಖಲಾಗಿದ್ದ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 9ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಉತ್ತರ ಪ್ರದೇಶ ಮೂಲದ ಸಂಗಮ್ ಲಾಲ್ ಪಾಂಡೆ ಎಂಬ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಟಿಎಸ್ ಠಾಕೂರ್ ಅವರು, ನೋಟು ನಿಷೇಧ ಬಳಿಕ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನಿಂದಾಗಿ ಜನ ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಜನರ ಸಂಕಷ್ಟ ಪರಿಹರಿಸಲು ಕೇಂದ್ರ ಸರ್ಕಾರ ಏನಾದರೂ ಕ್ರಮಗಳನ್ನು ಕೈಗೊಳ್ಳಬಹುದೇ? ಎಂದು ಪ್ರಶ್ನಿಸಿದರು. ಅಲ್ಲದೆ ಈ ಬಗ್ಗೆ ಮುಂದಿನ ವಿಚಾರಣೆಯಲ್ಲಿ ವಿವರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
ಇನ್ನು ಈ ಸಂಬಂಧ ಈ ಹಿಂದೆ ನಡೆದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ್ದ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಅವರು, ನೋಟು ನಿಷೇಧ ಬಳಿಕ ಉಂಟಾಗಿದ್ದ ಆರ್ಥಿಕ ಬಿಕ್ಕಟ್ಟು ಶಮನ ಸಂಬಂಧ ಕ್ರಮಗಳ ಕುರಿತು ಅಫಿಡವಿಟ್ ಸಲ್ಲಿಸಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು. ನೋಟು ನಿಷೇಧದಿಂದಾಗಿ ಕೇಂದ್ರ ಸರ್ಕಾರ ನಗದು ರಹಿತ ವಹಿವಾಟಿಗೆ ಉತ್ತೇಜನ ನೀಡುತ್ತಿದೆ. ಈ ಕ್ರಮದ ಮೂಲಕ ಅಕ್ರಮಗಳನ್ನು ನಿಯಂತ್ರಿಸಬಹುದು ಎಂದು ಹೇಳಿತ್ತು.