
ಕೋಲ್ಕತಾ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಭಾರತೀಯ ಸೇನೆ ವಿರುದ್ಧ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬುಧವಾರ ಪ್ರಕರಣವೊಂದು ದಾಖಲಾಗಿದೆ.
ಪಶ್ಚಿಮ ಬಂಗಾಳದ ಬಿಜೆಪಿ ಕಾರ್ಯಕರ್ತ ಮಾನವ ಶರ್ಮಾ ಎಂಬುವವರು ಮಮತಾ ಬ್ಯಾನರ್ಜಿಯವರ ವಿರುದ್ಧ ಕೋಲ್ಕತಾದ ಜೊರಾಸ್ಯಾಂಕೋ ಥಾಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಭಾರತೀಯ ಸೇನೆ ವಿರುದ್ಧ ಹೇಳಿಕೆಯನ್ನು ನೀಡಿದ್ದು, ಮಮತಾ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಇಮೇಲ್ ಮೂಲಕ ಮಾನವ್ ಶರ್ಮಾ ಅವರು ಕೋಲ್ಕತಾ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆಂದು ಹೇಳಲಾಗುತ್ತಿದೆ.
ಡಿಸೆಂಬರ್ 1 ರಂದು ಮಮತಾ ಬ್ಯಾನರ್ಜಿಯವರು ಭಾರತೀಯ ಸೇನೆ ವಿರುದ್ಧ ಹೇಳಿಕೆ ನೀಡಿದ್ದಾರೆ. ಆರೋಪಗಳನ್ನು ಮಾಡುವ ಮೂಲಕ ರಾಜಕೀಯ ಉದ್ದೇಶದಿಂದ ಭಾರತೀಯ ಸೇನೆ ವರ್ಚಸ್ಸಿಗೆ ಧಕ್ಕೆಯುಂಟು ಮಾಡಿದ್ದಾರೆ. ಅಲ್ಲದೆ, ಕೇಂದ್ರ ರಾಜ್ಯ ಸರ್ಕಾರದ ವಿರುದ್ಧ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಮಮತಾ ಅವರು ಸಾರ್ವಜನಿಕರಿಗೆ ತಪ್ಪು ಮಾಹಿತಿಯನ್ನು ರವಾನೆ ಮಾಡುತ್ತಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧವೂ ಮಮತಾ ಬ್ಯಾನರ್ಜಿ ಗಂಭೀರ ಆರೋಪಗಳನ್ನು ಮಾಡುತ್ತಿದ್ದು, ನೋಟು ನಿಷೇಧ ಹಿಡಿದು ಆಧಾರ ರಹಿತ ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ಅಲ್ಲದೆ, ಬೆದರಿಕೆಗಳನ್ನು ಹಾಕುತ್ತಿದ್ದಾರೆ. ಹೀಗಾಗಿ ನನ್ನ ದೂರನ್ನು ಗಂಭೀರವಾಗಿ ಪರಿಗಣಿಸಿ ಮಮತಾ ಬ್ಯಾನರ್ಜಿಯವರ ವಿರುದ್ಧ ಎಫ್ಐಆರ್ ದಾಖಲಿಸಬೇಕಿದ್ದು, ಮಮತಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮಾನವ್ ಶರ್ಮಾ ಹೇಳಿದ್ದಾರೆ.
Advertisement