

ಚೆನ್ನೈ: ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅನಾರೋಗ್ಯಕ್ಕೀಡಾಗಿರುವ ಹಿನ್ನಲೆಯಲ್ಲಿ ಶನಿವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಚೆನ್ನೈಗೆ ಭೇಟಿ ನೀಡಲಿದ್ದು, ಆರೋಗ್ಯ ವಿಚಾರಿಸಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಕರುಣಾನಿಧಿಯವರು ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದು, ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ರಾಹುಲ್ ಗಾಂಧಿಯವರು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ.
ಕರುಣಾ ನಿಧಿಯವರು ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದು, ನಿರ್ಜಲೀಕರಣದಿಂದಾಗಿ ಡಿಸೆಂಬರ್ 1 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಗುಣಮುಖರಾಗಿ ಕೆಲ ದಿನಗಳ ಹಿಂದಷ್ಟೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು. ಆದರೆ, ಕಳೆದ ಗುರುವಾರ ತಡರಾತ್ರಿ ಮತ್ತೆ ಅನಾರೋಗ್ಯ ಉಂಟಾದ ಹಿನ್ನೆಲೆಯಲ್ಲಿ ಕಾವೇರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪ್ರಸ್ತುತ ಕರುಣಾನಿಧಿಯವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.