

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಡಿಸೆಂಬರ್ 19 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಲಿದ್ದಾರೆ.
ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸುವಂತೆ ಪನ್ನೀರ್ ಸೆಲ್ವಂ ಪ್ರಧಾನಿ ಬಳಿ ಮನವಿ ಮಾಡಲಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊತ್ತಮೊದಲ ಬಾರಿಗೆ ಡಿಸೆಂಬರ್ 10 ರಂದು ಸಚಿವರು ಹಾಗೂ ಶಾಸಕರುಗಳ ಸಭೆ ಕರೆದು ಜಯಲಲಿತಾ ಅವರಿಗೆ ಭಾರತ ರತ್ನ ನೀಡುವಂತೆ ಶಿಫಾರಸು ಮಾಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಜೊತೆಗೆ ಸಂಸತ್ ಆವರಣದಲ್ಲಿ ಜಯಲಲಿತಾ ಕಂಚಿನ ಪ್ರತಿಮೆ ನಿರ್ಮಾಣ ಮಾಡಲು ಕೇಂದ್ರ ಸರ್ಕಾರವನ್ನು ಆಗ್ರಹಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು.
ಸಿಎಂ ಆದ ನಂತರ ಮೊಟ್ಟ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡುತ್ತಿರುವ ಪನ್ನೀರ್ ಸೆಲ್ವಂ ತಮಿಳುನಾಡಿನ ವಿವಿಧ ಬೇಡಿಕೆಗಳನ್ನು ಪ್ರಧಾನಿ ಮೋದಿ ಅವರಿಗೆ ಸಲ್ಲಿಸಲಿದ್ದಾರೆ. ಜೊತೆಗೆ ವಾರ್ಧಾ ಚಂಡಮಾರುತದಿಂದ ಉಂಟಾಗಿರುವ ನಷ್ಟಕ್ಕೆ ಆರ್ಥಿಕ ಸಹಾಯ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಿದ್ದಾರೆ.