

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಅಮೆರಿಕಾ ಮೂಲದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ ನಾಲ್ವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಟೆಲ್ ನ ಇಬ್ಬರು ಸಿಬ್ಬಂದಿ ಸೇರಿದಂತೆ ಓರ್ವ ಟೂರ್ ಗೈಡ್ ಹಾಗೂ ಚಾಲಕನೊಬ್ಬನನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ಏಪ್ರಿಲ್ ತಿಂಗಳಿನಲ್ಲಿ ಫೈವ್ ಹೋಟೆಲ್ ವೊಂದರಲ್ಲಿ ಹೋಟೆಲ್ ನ ಸಿಬ್ಬಂದಿಗಳು ಸೇರಿದಂದೆ ಐವರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು ಎಂದು ಅಮೆರಿಕಾ ಮೂಲದ ಮಹಿಳೆಯೊಬ್ಬರು ಪ್ರಕರಣವೊಂದನ್ನು ದಾಖಲಿಸಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಅಧಿಕಾರಿಗಳು ಡಿಸೆಂಬರ್ 3 ರಂದು ಎಫ್ಐಆರ್ ದಾಖಲಿಸಿಕೊಂಡಿದ್ದರು. ಇದೀಗ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ಮತ್ತೋರ್ವನಿಗಾಗಿ ತೀವ್ರ ಶೋಧ ಆರಂಭಿಸಿದ್ದಾರೆ. ಬಂಧಿತ ಆರೋಪಿಗಳ ಕುರಿತಂತೆ ಮಾಹಿತಿ ಬಹಿರಂಗ ಪಡಿಸಲು ಪೊಲೀಸರು ನಿರಾಕರಿಸಿದ್ದಾರೆ.