ನವದೆಹಲಿ: ದೇಶ ವಿರೋಧಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಜವಾಹರ್‍ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್‍ಯು)ದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರನ್ನು ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಲಾಗಿದೆ.
ಇಂದು ದೇಶದ್ರೋಹದ ಆರೋಪದ ಮೇಲೆ ಜೆಎನ್ ಯು ಕ್ಯಾಂಪಸ್ ನಲ್ಲಿರುವ ವಸತಿ ನಿಲಯದಲ್ಲಿ ಕನ್ಹಯ್ಯ ಕುಮಾರ್ ಅವರನ್ನು ಬಂಧಿಸಿದ್ದ ದೆಹಲಿ ಪೊಲೀಸರು, ಪಟಿಯಾಲ ಹೌಸ್ ಕೋರ್ಟ ಗೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್, ಆರೋಪಿಯನ್ನು ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.
ಕೋರ್ಟ್ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್, ಅಫ್ಜಲ್ ಗುರು ಗಲ್ಲಿಗೇರಿಸಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ ನಾನು ಇರಲಿಲ್ಲ. ಎಬಿವಿಪಿ ಹಾಗೂ ಪ್ರತಿಭಟನಾಕಾರರ ನಡುವಿನ ಘರ್ಷಣೆ ನಂತರ ನಾನು ಸ್ಥಳಕ್ಕೆ ಬಂದಿದೆ ಎಂದು ಹೇಳಿದ್ದಾರೆ. ಅಲ್ಲದೆ ಚುನಾವಣೆಯಲ್ಲಿ ಎಬಿವಿಪಿಯನ್ನು ಸೋಲಿಸಿದ್ದಕ್ಕಾಗಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಭಾರತ ವಿರೋಧಿ ಪ್ರತಿಭಟನೆ ಆಯೋಜಿಸಿದ್ದಕ್ಕೆ ಜೆಎನ್ ಯು ವಿದ್ಯಾರ್ಥಿ ಸಂಘಟನೆ ಜವಾಬ್ದಾರನಲ್ಲ ಎಂದು ಕುನ್ಹಯ್ಯ ಕುಮಾರ್ ಅವರು ಹೇಳಿದ್ದಾರೆ.
ಸಂಸತ್ ಮೇಲೆ ದಾಳಿ ನಡೆಸಿದ ಆರೋಪಿ ಅಫ್ಜಲ್ ಗುರು ಗಲ್ಲಿಗೇರಿಸಿದ್ದನ್ನು ಖಂಡಿಸಿ, ವಿದ್ಯಾರ್ಥಿಗಳ ಗುಂಪೊಂದು ಫೆಬ್ರವರಿ 9ರಂದು ವಿವಿಯಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಈ ವೇಳೆ ಕೆಲವು ವಿದ್ಯಾರ್ಥಿಗಳು ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ ಘಟನೆ ನಡೆದಿತ್ತು.