ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೆ ತಂದಿರುವುದು ಸಂವಿಧಾನ ಬಾಹಿರವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಚುನಾಯಿತ ಸರ್ಕಾರವನ್ನು ನಿಷ್ಕ್ರಿಯೆಗೊಳಿಸಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸಿರುವುದು ಸಂವಿಧಾನ ಬಾಹಿರವಾಗಿದೆ ಎಂದು ಕೇಜ್ರಿವಾಲ್ ಅಭಿಪ್ರಾಯಪಟ್ಟಿದ್ದಾರೆ.
ಚುನಾಯಿತ ಸರ್ಕಾರವನ್ನು ಅಮಾನತುಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿಗೆ ತನ್ನಿ ಎಂದು ಸಂವಿಧಾನ ಹೇಳುವುದಿಲ್ಲ. ಅರುಣಾಚಲದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತಂದು ಸಂವಿಧಾನದ ಕೊಲೆ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿತ್ತು. ಆದರೆ, ಸರ್ಕಾರದ ಆಡಳಿತಕ್ಕೆ ಸಂಬಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿತ್ತು. ಈ ವೇಳೆ ದಿಢೀರ್ ಎಂದು ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸಿರುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.