

ಹೈದರಾಬಾದ್: ನೂತನ ತೆಲಂಗಾಣ ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಸೋಮವಾರ ಬೆಳಗ್ಗೆ ರಾಜಧಾನಿ ಹೈದರಾಬಾದ್ ನಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ.
ಹೈದರಾಬಾದ್ ನ ವಡ್ಡೇರಾ ಬಸ್ತಿ ಪ್ರದೇಶದಲ್ಲಿ ಈ ಧಾರುಣ ಘಟನೆ ನಡೆದಿದ್ದು, ದುಷ್ಕರ್ಮಿಗಳು ಹಚ್ಚಿದ ಬೆಂಕಿಯಿಂದಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಸ್ಥಳೀಯರು ನೀಡಿರುವ ಮಾಹಿತಿಯಂತೆ ಇಂದು ಬೆಳಗ್ಗೆ ಹೈದಾರಾಬಾದ್ ನ ವಡ್ಡೇರಾ ಬಸ್ತಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆ ಮತ್ತು ಯುವಕರ ಗುಂಪಿನ ನಡುವೆ ವಾಗ್ವಾದ ನಡೆದಿದ್ದು, ಬಳಿಕ ವಾಗ್ವಾದ ವಿಕೋಪಕ್ಕೆ ತಿರುಗಿದೆ. ಈ ವೇಳೆ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂಧಿಸಿದ ಯುವಕರ ತಂಡ ನೋಡ-ನೋಡುತ್ತಿದ್ದಂತೆಯೇ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಬಳಿಕ ಘಟನಾ ಪ್ರದೇಶದಲ್ಲಿ ಜನರು ಹೆಚ್ಚಾಗುತ್ತಿದ್ದಂತೆಯೇ ದುಷ್ಕರ್ಮಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಮಹಿಳೆಗೆ ಹಚ್ಚಿದ್ದ ಬೆಂಕಿಯನ್ನು ಸ್ಥಳೀಯರು ನಂದಿಸಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ಮಹಿಳೆಯನ್ನು ಚಂದ್ರಕಲಾ ಎಂದು ಗುರುತಿಸಲಾಗಿದ್ದು, ಬೆಂಕಿ ಹಚ್ಚಿದ ಯುವಕರ ಪೈಕಿ ಬಂಟಿ ಎಂಬಾತನ ವಿರುದ್ಧ ತುಕಾರಾಮ್ ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೆ ತುರ್ತು ಕಾರ್ಯಾಚರಣೆ ನಡೆಸಿರುವ ಪೊಲೀಸರು ಬಂಟಿ ಮತ್ತು ಆತನ ಸ್ನೇಹಿತರನ್ನು ಬಂಧಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.