

ನವದೆಹಲಿ: ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ನಜ್ಮಾ ಎ. ಹೆಪ್ತುಲ್ಲಾ ಹಾಗೂ ಜಿ.ಎಂ.ಸಿದ್ದೇಶ್ವರ್ ಅವರು ತಮ್ಮ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ರಾಜೀನಾಮೆ ಪತ್ರವನ್ನು ಈಗಾಗಲೇ ಸಲ್ಲಿಸಲಾಗಿದ್ದು, ಸಚಿವರ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿಯವರು ಅಂಗೀಕರಿಸಿದ್ದಾರೆ. ಅಲ್ಲದೆ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಸ್ಥಾನವನ್ನು ಎಂ.ಎ. ನಖ್ವಿಯವರು ಮುಂದುವರೆಸುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಜುಲೈ 4 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇಂದ್ರ ಸಚಿವ ಸಂಪುಟ ಪುನಾರಚನೆ ಮಾಡಿದಾಗ ಜಿ.ಎಂ. ಸಿದ್ದೇಶ್ವರ್ ಅವರನ್ನು ಸಂಪುಟದಿಂದ ಕೈಬಿಟ್ಟಿದ್ದರು. ಸಂಪುಟದಿಂದ ಕೈಬಿಟ್ಟಿದ್ದರೂ ಸಿದ್ದೇಶ್ವರ್ ಅವರು ರಾಜೀನಾಮೆ ನೀಡದೆಯೇ ತಮ್ಮ ಸ್ಥಾನದಲ್ಲಿ ಮುಂದುವರೆದಿದ್ದರು. ಸಿದ್ದೇಶ್ವರ್ ಅವರ ಈ ವರ್ತನೆ ಸಾಕಷ್ಟು ಕುತೂಹಲ ಮೂಡಿಸಿತ್ತು.
ದಾವಣೆಗೆರೆ ಸಂಸದರಾಗಿದ್ದ ಸಿದ್ದೇಶ್ವರ್ ಅವರು ಬೃಹತ್ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆ ಖಾತೆಯ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವರಾಗಿಯೂ ಅವರು ಕೆಲಸ ಮಾಡಿದ್ದಾರೆ.