ನವದೆಹಲಿ: ಆಗಸ್ಟ್ 4ರಂದು ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಸಾರ್ಕ್ ಸಚಿವರ ಶೃಂಗ ಸಭೆ ವೇಳೆ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಯುವ ಸಾಧ್ಯತೆಗಳನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ಸ್ಪಷ್ಟವಾಗಿ ತಳ್ಳಿಹಾಕಿದೆ.
ಈ ಬಗ್ಗೆ ಟ್ವಿಟ್ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಅವರು, ಇಸ್ಲಾಮಾಬಾದ್ ನಲ್ಲಿ ನಡೆಯುವ ಸಾರ್ಕ್ ಶೃಂಗ ಸಭೆಗೆ ಗೃಹ ಸಚಿವ ರಾಜನಾಥ್ ಸಿಂಗ್ ಅವರು ತೆರಳುತ್ತಿದ್ದಾರೆ. ಆದರೆ ಈ ವೇಳೆ ಯಾವುದೇ ದ್ವಿಪಕ್ಷೀಯ ಮಾತುಕತೆ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವಾಲಯದ ಹೆಸರು ಉಲ್ಲೇಖಿಸದ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿದ ಕೆಲವು ವರದಿಗಳು ರಾಜನಾಥ್ ಸಿಂಗ್ ಅವರು ಪಾಕ್ ಗೃಹ ಸಚಿವ ಚೌಧರಿ ನಿಸಾರ್ ಅಲಿ ಖಾನ್ ಮತ್ತು ಪಾಕ್ ಪ್ರಧಾನಿ ನವಾಜ್ ಷರೀಪ್ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಿರುವ ಹಿನ್ನೆಲೆಯಲ್ಲಿ ಸ್ವರೂಪ್ ಈ ಸ್ಪಷ್ಟನೆ ನೀಡಿದ್ದಾರೆ.
ಎಂಟು ಸದಸ್ಯರ ಸಾರ್ಕ್ ರಾಷ್ಟ್ರಗಳ ಗೃಹ ಸಚಿವರ ಸಭೆ ಆಗಸ್ಟ್ 3ರಿಂದ 4ರವರೆಗೆ ನಡೆಯಲಿದ್ದು, ಈ ವೇಳೆ ರಾಜನಾಥ್ ಸಿಂಗ್ ಅವರು ಗಡಿ ಭಯೋತ್ಪಾದನೆಯನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ.