ನವದೆಹಲಿ: ದೇಶದ್ರೋಹದ ಆರೋಪದ ಮೇಲೆ ಜೈಲು ಪಾಲಾಗಿದ್ದ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರು ಗುರುವಾರ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಕನ್ಹಯ್ಯ ಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ನಿನ್ನೆ ಆರು ತಿಂಗಳ ಅವಧಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರನ್ನು ಭಾರಿ ಭದ್ರತೆಯೊಂದಿಗೆ ಜೈಲಿನಿಂದ ಬಿಡುಗಡೆ ಮಾಡಿ, ಅಪರಿಚಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಿರಲಿ ಎಂಬ ಉದ್ದೇಶದಿಂದ ಜೈಲಿನ ಹೊರಗಡೆ ಭಾರಿ ಭದ್ರತೆ ಏರ್ಪಡಿಸಲಾಗಿತ್ತು.
ಸಂಸತ್ತು ದಾಳಿ ರೂವಾರಿ ಅಫ್ಜಲ್ ಗುರುವಿಗೆ ಮರಣದಂಡನೆ ನೀಡಿ ಮೂರು ವರ್ಷವಾದ ಹಿನ್ನೆಲೆಯಲ್ಲಿ ಫೆಬ್ರವರಿ 9ರಂದು ಜವಹರಲಾಲ ನೆಹರೂ ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ಕನ್ಹಯ್ಯ ಕುಮಾರ್ ಅವರನ್ನು ದೆಹಲಿ ಪೊಲೀಸರು ಫೆಬ್ರವರಿ 12ರಂದು ಬಂಧಿಸಿದ್ದರು.