

ಬೆಂಗಳೂರು: ಏಪ್ರಿಲ್- ಮೇ ತಿಂಗಳಲ್ಲಿ ಬೆಂಗಳೂರಿನ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಲಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಮಿತಿಯ ರಾಜ್ಯ ನಿರ್ದೇಶಕ ಜಿಎಸ್ ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ.
ಅಂತರ್ಜಲದ ಬಗ್ಗೆ ಕೇಂದ್ರ ಅಂತರ್ಜಲ ನೀರು ಮಂಡಳಿ ಹಾಗೂ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಎಲ್ ನಿನೊ ಪರಿಣಾಮದಿಂದ ಬರ ಸ್ಥಿತಿ ಎದುರಾಗಲಿದ್ದು, ಮಳೆ ಸಾಧ್ಯತೆಯೂ ಕ್ಷೀಣಿಸಲಿದೆ. ಇದರ ಪರಿಣಾಮ ಬಳ್ಳಾರಿ, ರಾಯಚೂರು, ಕಲಬುರ್ಗಿ, ಯಾದಗಿರಿ, ವಿಜಯಪುರ, ಕೊಪ್ಪಳ ಜಿಲ್ಲೆಗಳಲ್ಲಿ ಏಪ್ರಿಲ್- ಮೇ ತಿಂಗಳಲ್ಲಿ ತಾಪಮಾನ 47 -48 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ, ಹೆಚ್ ಜಿ ಶಿವಾನಂದ ಮೂರ್ತಿ, ಮುಂದಿನ ಪೀಳಿಗೆಗೆ ನೀರನ್ನು ಉಳಿಸುವುದಕ್ಕೆ ಒತ್ತು ನೀಡಬೇಕಾಗಿದೆ ಎಂದು ಕರೆ ನೀಡಿದ್ದಾರೆ. ದೇಶದ ಬಹುತೇಕ ಪ್ರದೇಶಗಳಲ್ಲಿ ಅಂತರ್ಜಲವನ್ನು ಅತಿಯಾಗಿ ಬಳಕೆ ಮಾಡಲಾಗುತ್ತಿದೆ. ಜಲಸಂರಕ್ಷಣೆಗಾಗಿ ಕೇಂದ್ರ ದಿಂದ ಜಲ್ ಕ್ರಾಂತಿ ಅಭಿಯಾನ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಿವಾನಂದ ಮೂರ್ತಿ ತಿಳಿಸಿದ್ದಾರೆ.