ಡೆಹ್ರಾಡೂನ್: ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.
ಉತ್ತರಾಖಂಡ್ ಕಾಡ್ಗಿಚ್ಚಿನ ಬಗ್ಗೆ ಯಾರೂ ಆತಂಕಪಡಬೇಕಿಲ್ಲ. ಕಳೆದ ರಾತ್ರಿ ನಾನು ಪರಿಶೀಲನೆ ನಡೆಸಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ರಾಜನಾಥ್ ಸಿಂಗ್ ಅವರು ಇಂದು ಲೋಕಸಭೆಗೆ ತಿಳಿಸಿದ್ದಾರೆ.
ಕಾಡ್ಗಿಚ್ಚು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ. ಅಲ್ಲದೆ ಮಾಹಿತಿ ತಿಳಿದ ಕೂಡಲೇ ಗೃಹ ಸಚಿವಾಲಯ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ ಎಂದರು.
ಇದೇ ವೇಳೆ ಕಾಡ್ಗಿಚ್ಚಿನ ಹಲವರು ಮೃತಪಟ್ಟಿದ್ದಾರೆ ಎಂಬ ವರದಿಯನ್ನು ಗೃಹ ಸಚಿವರು ತಳ್ಳಿಹಾಕಿದ್ದು, ಸಾವಿನ ಬಗ್ಗೆ ಸ್ಥಳೀಯ ಆಡಳಿತದಿಂದ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದು ಹೇಳಿದರು.
ಶೂನ್ಯ ವೇಳೆಯಲ್ಲಿ ತೃಣಮೂಲಕ ಕಾಂಗ್ರೆಸ್ ನ ಸೌಗತ್ ರಾಯ್, ಬಿಜೆಪಿಯ ಜಗದಂಬಿಕಾ ಪಾಲ್ ಹಾಗೂ ಇತರೆ ಸದಸ್ಯರು ವಿಷಯ ಪ್ರಸ್ತಾಪಿಸಿದರು.