

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಮ್ಮು-ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ವಿವಾದವೊಂದನ್ನು ಸೃಷ್ಟಿಸಿದ್ದಾರೆ.
ಪದಗ್ರಹಣ ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ ಹಾಡಲಾಗುತ್ತಿದ್ದ ವೇಳೆ ಫಾರೂಕ್ ಅಬ್ದುಲ್ಲಾ ಮೊಬೈಲ್ ನಲ್ಲಿ ಮಾತನಾಡುತ್ತಿರುವುದು ಕಂಡುಬಂದಿದ್ದು ವಿವಾದಕ್ಕೆ ಗುರಿಯಾಗಿದೆ. ಸಂವಿಧಾನದ ಪರಿಚ್ಚೇಧ 51(e) ಪ್ರಕಾರ ರಾಷ್ಟ್ರಗೀತೆ ಹಾಗೂ ರಾಷ್ಟ್ರಧ್ವಜಕ್ಕೆ ಗೌರವ ಸೂಚಿಸುವುದು ರಾಷ್ಟ್ರದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ.
ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕಿ ಅಂಬಿಕಾ ಸೋನಿ, ಅಲ್ಲಿ ಏನು ನಡೆದಿದೆ ಎಂಬುದು ನನಗೆ ನಿಜಕ್ಕೂ ತಿಳಿದಿಲ್ಲ.ಆದರೆ ರಾಷ್ಟ್ರಗೀತೆ ಹಾಡಬೇಕಾದರೆ ಎದ್ದು ನಿಂತು ಗೌರವ ಸೂಚಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದ್ದಾರೆ. ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರೊಂದಿಗೆ ಭೂತಾನ್ ಪ್ರಧಾನಿ ಶೆರಿಂಗ್ ತೊಬ್ಗೆ, ಬಾಂಗ್ಲಾದೇಶದ ಕೈಗಾರಿಕಾ ಸಚಿವ ಅಮೀರ್ ಹೊಸ್ಸೇನ್, ಕೇಂದ್ರ ಸಚಿವ ಅರುಣ್ ಜೇಟ್ಲಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಉತ್ತರ ಪ್ರದೇಶ ಸಿಎಂ ಅಖಿಲೇಶ್ ಯಾದವ್, ಆರ್ ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವಾರದಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿದ ಎರಡನೇ ಘಟನೆ ಇದಾಗಿದೆ. ರಾಷ್ಟ್ರಗೀತೆಗೆ ಗೌರವ ತೋರದ ಇಬ್ಬರು ಪತ್ರಕರ್ತರನ್ನು ಕಾರ್ಯಕ್ರಮದಿಂದ ಹೊರಕಳಿಸಲಾಗಿತ್ತು.