ವಿಜಯವಾಡ: ನೋಟ್ ನಿಷೇಧದಿಂದ ಉಂಟಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಐದು ರಾಜ್ಯಗಳ ಮುಖ್ಯಮಂತ್ರಿಗಳನ್ನೊಳಗೊಂಡ ಸಮಿತಿಯೊಂದನ್ನು ರಚಿಸಲು ಕೇಂದ್ರ ನಿರ್ಧರಿಸಿದ್ದು, ಈ ಸಮಿತಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಮುಖ್ಯಸ್ಥರಾಗುವ ಸಾಧ್ಯತೆ ಇದೆ.
ಆಂಧ್ರ ಸಿಎಂ ಕಚೇರಿಯ ಮೂಲಗಳ ಪ್ರಕಾರ, ಮುಖ್ಯಮಂತ್ರಿಗಳ ಸಮಿತಿಯ ಸದಸ್ಯರ ಆಯ್ಕೆ ಇನ್ನೂ ಅಂತಿಮವಾಗಿಲ್ಲ. ಆದರೆ ಸಮಿತಿಯ ನೇತೃತ್ವ ವಹಿಸಿಕೊಳ್ಳುವಂತೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಚಂದ್ರಬಾಬು ನಾಯ್ಡು ಅವರಿಗೆ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.
ಈ ಸಮಿತಿ ನೋಟ್ ನಿಷೇಧದ ನಂತರ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲಿದೆ ಮತ್ತು ಸಮಸ್ಯೆ ಪರಿಹಾರಕ್ಕೆ ಸಲಹೆಗಳನ್ನು ಸೂಚಿಸಬಹುದಾಗಿದೆ.
ಯಾವ ಯಾವ ರಾಜ್ಯದ ಮುಖ್ಯಮಂತ್ರಿಗಳು ಈ ಸಮಿತಿಯ ಸದಸ್ಯರಾಗಲಿದ್ದಾರೆ ಎಂಬುದುರ ಬಗ್ಗೆ ಯಾವುದೇ ಮಾಹಿತಿ ಇಲ್ಲ.
ಎರಡು ದಿನಗಳ ಹಿಂದಷ್ಟೇ ಅರುಣ್ ಜೇಟ್ಲಿ ಅವರು ನಗದು ರಹಿತ ವ್ಯವಹಾರವನ್ನು ಪ್ರಚಾರ ಮಾಡುವಲ್ಲಿ ಆಂಧ್ರ ಪ್ರದೇಶ ಮೊದಲ ಸ್ಥಾನದಲ್ಲಿದೆ ಎಂದು ಸಂಸತ್ತಿನಲ್ಲಿ ಹೇಳಿದ್ದರು.