ಬರೇಲಿ: ವಾಟ್ಸ್ ಆಪ್ ಗ್ರೂಪ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆಕ್ಷೇಪಾರ್ಹ ಚಿತ್ರ ಪೋಸ್ಟ್ ಮಾಡಿದ ಆರೋಪದ ಮೇಲೆ ಉತ್ತರಪ್ರದೇಶದ ಪಂಚಾಯತ್ ರಾಜ್ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಬುಧವಾರ ಅಮಾನತು ಮಾಡಲಾಗಿದೆ.
ಪಂಚಾಯತ್ ರಾಜ್ ಅಭಿವೃದ್ದಿ ಇಲಾಖೆಯ ಅಧಿಕಾರಿ ಹಿಫಾಜತ್ ಉಲ್ಲಾಹ್ ಖಾನ್ ಎಂಬವರು ವಾಟ್ಸ್ ಆಪ್ ಗ್ರೂಪ್ ನಲ್ಲಿ ಮೋದಿಯವರ ಆಕ್ಷೇಪಾರ್ಹ ಚಿತ್ರವೊಂದನ್ನು ಪೋಸ್ಟ್ ಮಾಡಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಬೆಹೆದಿ ಪಂಚಾಯತ್‍ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾನ್ ಅವರಿಗೆ ಈ ಸಂಬಂಧ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆದರೆ ಖಾನ್ ನೀಡಿದ ಉತ್ತರ ತೃಪ್ತಿಕರವಾಗಿರಲಿಲ್ಲ, ಹೀಗಾಗಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದೇ ರೀತಿಯ ಇನ್ನೊಂದು ಪ್ರಕರಣದಲ್ಲಿ ಹರಿಓಂ ಸಿಂಗ್ ಎಂಬವರ ವಿರುದ್ಧ ಕೇಸು ದಾಖಲಿಸಲಾಗಿದೆ.
ಕಾಲೇಜು ಮ್ಯಾನೇಜರ್ ಆಗಿರುವ ಸಿಂಗ್, ವಾಟ್ಸ್ ಆಪ್ ಗ್ರೂಪ್‍ನಲ್ಲಿ ಮೋದಿಯವರ ಅಕ್ಷೇಪಣಾರ್ಹ ಫೋಟೋವೊಂದನ್ನು ಹರಿಯಬಿಟ್ಟಿದ್ದರು.
ಸಿಂಗ್ ವಿರುದ್ಧ ಬಿಜೆಪಿ ಜಿಲ್ಲಾ ಅಧ್ಯಕ್ಷ ರವೀಂದ್ರ ಸಿಂಗ್ ರಾಥೋಡ್ ಎಂಬವರು ಕೋಟ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ಮುಂದುವರಿದಿದೆ.