

ಭೋಪಾಲ್: ಚಾಲಕನ ನಿಯಂತ್ರಣ ತಪ್ಪಿದ ಬಸ್ ಒಂದು ನದಿಗೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಭಾನುವಾರ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಸಪನ್ ನದಿಯಲ್ಲಿ ಈ ದುರಂತ ಸಂಭವಿಸಿದ್ದು, ಸುಮಾರು 24 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಬಸ್ ನದಿಗೆ ಉರುಳಿದೆ ಎಂದು ತಿಳಿದುಬಂದಿದೆ. ಪರಿಣಾಮ ಸುಮಾರು 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಈ ವರೆಗೂ 9 ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಬಸ್ ನಲ್ಲಿದ್ದ ಹಲವು ಪ್ರಯಾಣಿಕರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಶಂಕೆ ಎದುರಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.